ನುಗ್ಗೇಹಳ್ಳಿ: ‘ರಾಜ್ಯದಲ್ಲಿ ಮೊರಾರ್ಜಿ ವಸತಿ ಶಾಲೆಯಂತೆ ಕಾರ್ಮಿಕ ಇಲಾಖೆಯಿಂದಲೂ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ದೃಷ್ಟಿಯಿಂದ ವಸತಿ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಹೋಬಳಿಯ ಗೂಳಿ ಹೊನ್ನೇನಹಳ್ಳಿ ಗ್ರಾಮದ ಸಮೀಪದ ಸೋಮವಾರ ಸಂತೆ ಬಳಿ ₹13.50 ಕೋಟಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಘದ ವತಿಯಿಂದ ನಿರ್ಮಾಣಗೊಂಡಿರುವ ಹೋಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗಿದ್ದು, ಇದರಿಂದ ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ವಸತಿ ಸಿಗಲಿದೆ’ ಎಂದರು.
‘2018ರಲ್ಲಿ ಹೋಬಳಿಯ ಮೊರಾರ್ಜಿ ವಸತಿ ಶಾಲೆಯ ಕಟ್ಟಡಕ್ಕೆ ಅನುಮೋದನೆ ದೊರೆತಿದ್ದು, ವಿಳಂಬವಾದರೂ ಗುಣಮಟ್ಟದ ಕಟ್ಟಡವನ್ನು ಕಟ್ಟಲಾಗಿದೆ. ಮುಂಬರುವ ದಿನಗಳಲ್ಲಿ ವಸತಿ ಶಾಲೆಯಲ್ಲಿ ಆಡಿಟೋರಿಯಂ, ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಕೊಡಿಸಲಾಗುವುದು’ ಎಂದು ಭರವಸೆ ನೀಡಿದರು.
‘ಜಿಲ್ಲೆಯ ಅಭಿವೃದ್ಧಿಗೆ ಎಚ್.ಡಿ. ದೇವೇಗೌಡರ ಹಾಗೂ ಎಚ್.ಡಿ. ರೇವಣ್ಣ ಅವರು ಆದ್ಯತೆ ನೀಡಿದ್ದಾರೆ. ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಅವರು ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡುತ್ತಿರುತ್ತಾರೆ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ‘ತಾಲ್ಲೂಕಿನಲ್ಲಿ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಬಾಗೂರು ಹಾಗೂ ಹಿರೀಸಾವೆ ಹೋಬಳಿಗಳಲ್ಲಿ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡುವಂತೆ ಜೊತೆಗೆ ನುಗ್ಗೇಹಳ್ಳಿ ನೂತನ ಮೊರಾರ್ಜಿ ವಸತಿ ಶಾಲೆಯಲ್ಲಿ ಆಡಿಟೋರಿಯಂ ಮತ್ತು ಕ್ರೀಡಾಂಗಣ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ₹2 ಕೋಟಿ ಅನುದಾನ ನೀಡಬೇಕು’ ಎಂದು ಸಚಿವರನ್ನು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ, ಎಡಿಸಿ ಶಾಂತಲಾ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಕ್ರೈಸ್‌ನ ಸೂಪರಿಡೆಂಟ್ ಎಂಜಿನಿಯರ್ ಜನಾರ್ದನ್, ಕಾರ್ಯಪಾಲಕ ಎಂಜಿನಿಯರ್ ಪಂಪಾಪತಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಟರಾಜ್, ಸಹಾಯಕ ಎಂಜಿನಿಯರ್ ಮಹೇಶ್, ಗುತ್ತಿಗೆದಾರ ಪ್ರಸನ್ನಕುಮಾರ್, ಮಟ್ಟನವಿಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷ ಅಶೋಕ್, ಎಸಿ ಮಾರುತಿ, ತಹಶೀಲ್ದಾರ್ ಶಂಕರಪ್ಪ, ಬಿಇಒ ಎಚ್.ಎನ್. ದೀಪ, ತಾಲ್ಲೂಕು ಪಂಚಾಯಿತಿ ಇಒ ಹರೀಶ್, ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆ ವಿಸ್ತಾರಣಾಧಿಕಾರಿ ರಾಜೇಶ್ ಚವಾಣ್, ಹೋಬಳಿ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲೆ ಸಾಂಚಿತ ಎಚ್. ವಿ. ಹಾಜರಿದ್ದರು.
ನವೋದಯ ಶಾಲೆಗಳಂತೆ ರಾಜ್ಯದ ಎಲ್ಲಾ ವಸತಿ ಶಾಲೆಗಳಲ್ಲೂ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಸಿದರೆ ರಾಜ್ಯದ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದುಶ್ರೇಯಸ್ ಎಂ.ಪಟೇಲ್ ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.