ಜಾವಗಲ್: ಗ್ರಾಮದಲ್ಲಿ ಎರಡು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ದೊಡ್ಡಘಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರ್ ಕಿತ್ತು ಹೋಗಿ, ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ವಾಹನ ಸವಾರರು ಈ ರಸ್ತೆಯಲ್ಲಿ ಜೀವ ಭಯದೊಂದಿಗೆ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಜಾವಗಲ್ ಗ್ರಾಮದ ಜನತಾ ಬಡಾವಣೆಯ ಮೂಲಕ ಹೊಸೂರು ಮಾರ್ಗವಾಗಿ ದೊಡ್ಡಘಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಮಳೆ ಹಾಗೂ ನಿರ್ವಹಣೆಯ ಕೊರತೆಯಿಂದ ರಸ್ತೆಯ ಬಹುತೇಕ ಕಡೆ ಗುಂಡಿಗಳು ಬಿದ್ದಿವೆ. ಇದರ ಜೊತೆಗೆ ಮಳೆಗಾಲದಲ್ಲಿ ರಸ್ತೆಯು ಸಂಪೂರ್ಣ ಕೆಸರು ಗದ್ದೆಯಂತೆ ಬದಲಾಗುತ್ತದೆ. ರಸ್ತೆಗೆ ಹಾಕಲಾಗಿದ್ದ ಡಾಂಬರ್ ಎರಡು ದಿನಗಳಿಂದ ನಿರಂತರ ಸುರಿದ ಮಳೆಗೆ ಕೊಚ್ಚಿ ಹೋಗಿ, ರಸ್ತೆಯಲ್ಲಿ ಜಲ್ಲಿ ಕಲ್ಲುಗಳು ಕಾಣುತ್ತಿವೆ. ಬೈಕ್ ಸವಾರರು ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡಬೇಕಾಗಿದೆ.
ದೊಡ್ಡಘಟ್ಟ ಗ್ರಾಮದಿಂದ ಪ್ರತಿನಿತ್ಯ ನೂರಾರು ಜನ ರೈತರು ವಾಣಿಜ್ಯ ಹಾಗೂ ವ್ಯಾಪಾರ ಉದ್ದೇಶ, ಇನ್ನಿತರ ಕೆಲಸ ಕಾರ್ಯಗಳಿಗಾಗಿ ಜಾವಗಲ್ ಗ್ರಾಮಕ್ಕೆ ಭೇಟಿ ಕೊಡುತ್ತಾರೆ. ಅನಿವಾರ್ಯವಾಗಿ ಈ ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಿದೆ.
ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸುವ ಮೊದಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೊಡ್ಡಘಟ್ಟ ಗ್ರಾಮಸ್ಥರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.