ಅರಸೀಕರೆ: ‘ಒಬ್ಬರಿಗೊಬ್ಬರ ಸಹಕಾರದಿಂದ ಸಹಕಾರ ಕ್ಷೇತ್ರವು ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯ’ ಎಂದು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ರುದ್ರಮುನಿ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ನಿರಂಜನ ಪೀಠದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸೌಹಾರ್ದ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
‘ಸಹಕಾರ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ನೌಕರರು ಪ್ರಾಮಾಣಿಕತೆ, ಪಾರದರ್ಶಕವಾಗಿ ಬಡವ ಬಲ್ಲಿದ ಎಂಬ ತಾರತಮ್ಯವಿಲ್ಲದೇ ಉತ್ತಮ ಮನೋಭಾವ ಹೊಂದಿ ಕೆಲಸ ಮಾಡಿದಾಗ ಮಾತ್ರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತವೆ’ ಎಂದರು.
ಸಂಘಗಳು ಅಭಿವೃದ್ಧಿಯಾದರೆ, ಷೇರುದಾರರಿಗೆ ಮತ್ತು ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ. ಎಲ್ಲರೂ ಸಂಘದ ಅಭ್ಯುದಯಕ್ಕೆ ಶ್ರಮಿಸುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸೌಹಾರ್ದ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ಮೈಸೂರು ಸಲಹೆಗಾರ ಶೇಖರ್ ಕೌಂಡಿನ್ಯ, ಸಹಕಾರ ಸಂಘಗಳ ಕಾರ್ಯವೈಖರಿಯ ಬಗ್ಗೆ ಮಾತನಾಡಿದರು.
ಸಹಕಾರ ಸಂಘದ ಉಪಾಧ್ಯಕ್ಷ ಎನ್.ಜಿ. ಮರುಳಸಿದ್ದ ಸ್ವಾಮಿ ನಾಗಸಮುದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯನಿರ್ವಹಣಾಧಿಕಾರಿ ಆರ್.ಬಿ. ಸುಷ್ಮಾ ವರದಿ ಓದಿದರು. ಅರಸೀಕೆರೆ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ, ಸಂಘದ ನಿರ್ದೇಶಕ ಎಸ್.ಎಂ. ಗಂಗಾಧರ್, ನಿರ್ದೇಶಕರಾದ ಎಲ್.ಸಿ. ಚಂದ್ರಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಂಪುರ ಶೇಖರಪ್ಪ, ಜಿ.ಪಂ. ಮಾಜಿ ಸದಸ್ಯ ಎಂ.ಎಸ್.ವಿ. ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಕೊಡ್ಲಿ ಬಸವರಾಜ್, ಮುಖಂಡ ಮಾಡಾಳು ಶಿವಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.