ADVERTISEMENT

ಸಂತ್ರಸ್ತರ ಭೂ ಕಬಳಿಸಿದವರನ್ನ ಜೈಲಿಗೆ ಕಳಹಿಸಿ

ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ರೈತರ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2019, 15:06 IST
Last Updated 25 ನವೆಂಬರ್ 2019, 15:06 IST
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.   

ಹಾಸನ: ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರ ಭೂಮಿ ಕಬಳಿಸಿದವರನ್ನ ಜೈಲಿಗೆ ಕಳುಹಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ವೃತ್ತದಿಂದ ನೂರಾರು ರೈತರು ಮೆರವಣಿಗೆಯಲ್ಲಿ ಬಂದು ಜಿಲ್ಲಾಧಿಕಾರಿ ಆರ್.ಗಿರೀಶ್‌ ಗೆ ಮನವಿ ಸಲ್ಲಿಸಿದರು.

ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ 1600 ಎಕರೆ ಅಕ್ರಮವಾಗಿ ಮಂಜೂರಾತಿ ಆಗಿದ್ದು, ಈ ಸಂಬಂಧ 414 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿದು ಜಿಲ್ಲಾಡಳಿತ ಸುಮ್ಮನಾಗಬಾರದು. ನೈಜ ಫಲಾನುಭವಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.

ADVERTISEMENT

ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಡಯಾಲಿಸಿಸ್‌ ಕೇಂದ್ರಗಳನ್ನು ತೆರೆದು ಬಡವರ ಜೀವ ಉಳಿಸಬೇಕು. ಡಯಾಲಿಸಿಸ್ ಚಿಕಿತ್ಸೆಗೆ ಶುಲ್ಕ ಪಡೆಯಬಾರದು. ಜಿಲ್ಲಾಸ್ಪತ್ರೆಯಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಂದ ಪಡೆಯುತ್ತಿರುವ ಶುಲ್ಕವನ್ನು ಕೂಡಲೇ ರದ್ದು ಪಡಿಸಬೇಕು ಎಂದರು.

ಆಲೂರು, ಸಕಲೇಶಪುರ ಭಾಗದಲ್ಲಿ ಆನೆ ಹಾವಳಿಯಿಂದ ಜನರು ಭಯಭೀತರಾಗಿದ್ದಾರೆ. ಸಾಕಷ್ಟು ಸಾವು, ನೋವು ಸಂಭವಿಸಿದೆ. ಹತ್ತು ವರ್ಷಗಳಲ್ಲಿ ಆನೆ ದಾಳಿಯಿಂದ 70 ರೈತರು ಮೃತಪಟ್ಟಿದ್ದಾರೆ. ಹಲವು ಕುಟುಂಬಕ್ಕೆ ಪರಿಹಾರ ನೀಡಿಲ್ಲ. ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಆನೆಗಳನ್ನು ಸ್ಥಳಾಂತರ ಮಾಡಬೇಕು ಅಥವಾ ಆನೆ ಕಾರಿಡಾರ್‌ ನಿರ್ಮಿಸಬೇಕು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಅರಣ್ಯ ಭವನ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಧ್ಯಾಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಪೋಷಣ ಭತ್ಯೆ ಹಲವು ತಿಂಗಳಿನಿಂದ ಸರಿಯಾಗಿ ಬರುತ್ತಿಲ್ಲ. ಆಧಾರ್‌ ಜೋಡಣೆ ನೆಪ ಹೇಳಿ ತಾಲ್ಲೂಕು ಕಚೇರಿ, ನಾಡ ಕಚೇರಿಗೆ ವೃದ್ಧರನ್ನು ಅಲೆದಾಡಿಸುವುದು ನಿಲ್ಲಿಸಬೇಕು. ಪ್ರತಿ ತಿಂಗಳು ಮಾಸಾಶನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿ ತಿಂಗಳ ಪಡಿತರಕ್ಕಾಗಿ ಬಯೋಮೆಟ್ರಿಕ್‌ ಪಡೆಯುವುದನ್ನು ನಿಲ್ಲಿಸಬೇಕು. ಬ್ಯಾಂಕ್‌ನವರು ರೈತರಿಗೆ ಸಾಲದ ನೋಟಿಸ್‌ ಕಳುಹಿಸಿ ಕೋರ್ಟ್‌ಗೆ ಅಲೆಯುವಂತೆ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾಧ್ಯಕ್ಷ ಮೆಹಬೂಬ್ ಪಾಷ (ಬಾಬು), ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಸಾವಿತ್ರಮ್ಮ, ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷ ಕಬ್ಬಳ್ಳಿಗೆರೆ ಮಂಜಯ್ಯ, ಮುಖಂಡ ಮಹಮದ್ ಸಾದಿಕ್, ಕುಮಾರ್, ಮೀಸೆ ರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.