ADVERTISEMENT

267 ಗ್ರಾ.ಪಂಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ

ಗಣರಾಜ್ಯೋತ್ಸವ ಸಮಾರಂಭದಲ್ಲಿ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 13:26 IST
Last Updated 26 ಜನವರಿ 2021, 13:26 IST
ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.
ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.   

ಹಾಸನ: ಜಿಲ್ಲೆಯ 267 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವ ಗುರಿ
ಹೊಂದಲಾಗಿದೆ ಎಂದು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ 72ನೇಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇದರಲ್ಲಿ 160 ಗ್ರಾಂ ಪಂಚಾಯಿತಿಗಳ ವಿಸ್ತೃತ ಕ್ರಿಯಾ ಯೋಜನೆಗೆ ಸರ್ಕಾರದಿಂದ ಅನುಮೋದನೆ
ದೊರೆತಿದ್ದು, ₹602 ಲಕ್ಷ ಪಂಚಾಯಿತಿಗಳಿಗೆ ಬಿಡುಗಡೆ ಮಾಡಲಾಗಿದೆ. ಎಲ್ಲಾ ನಗರ ಸ್ಥಳೀಯ
ಸಂಸ್ಥೆಗಳಿಗೆ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಸಂಬಂಧಿಸಿದಂತೆ ಒಟ್ಟು₹21 ಕೋಟಿಗೆ ವಿಸ್ತೃತಾ ಯೋಜನಾ ವರದಿ ತಯಾರಿಸಲಾಗಿದ್ದು, ಈವರೆಗೆ ₹6.69 ಕೋಟಿ ಅನುದಾನ
ಬಿಡುಗಡೆಯಾಗಿದೆ ಎಂದು ತಿಳಿಸಿದರು.

ADVERTISEMENT

ಕನಿಷ್ಠ ಬೆಂಬಲ ಬೆಲೆಯೊಂದಿಗೆ ಭತ್ತ ಹಾಗೂ ರಾಗಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈ
ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾ
ಕ್ರೀಡಾಂಗಣ ಮೇಲ್ದರ್ಜೆಗೇರಿಸಲು ₹99 ಲಕ್ಷ ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.
ಹೊಳೆನರಸೀಪುರ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ
₹4.50 ಕೋಟಿ ಮಂಜೂರಾಗಿದ್ದು, ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ವಿವರಿಸಿದರು.

17 ಸಾವಿರ ಕೊರೊನಾ ಸೇನಾನಿಗಳಿಗೆ ಹೆಸರು ನೋಂದಾಯಿಸಿದ್ದು, ಪ್ರತಿದಿನ ಎಲ್ಲಾ ತಾಲ್ಲೂಕುಗಳಲ್ಲಿ ಗಿ
ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದರು.

2020ರಲ್ಲಿ ಪ್ರವಾಹ ಪೀಡಿತ ಪ್ರದೇಶವೆಂದು ಘೋಷಣೆಯಾಗಿದ್ದ 6 ತಾಲ್ಲೂಕುಗಳಲ್ಲಿ 504 ಮನೆಗಳು
ಹಾನಿಗೀಡಾಗಿದ್ದು, ಮನೆ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ. 10,508 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ
ಹಾನಿಯಾಗಿದ್ದು, 17,246 ರೈತರಿಗೆ ₹12.82 ಕೋಟಿ ಪರಿಹಾರ ದೊರೆತಿದೆ ಎಂದರು.

ಹಾಸನ ನಗರ ವ್ಯಾಪ್ತಿಯಲ್ಲಿ ಅಮೃತ್‌ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ₹117 ಕೋಟಿ ಅನು‌ದಾನ ಮಂಜೂರಾಗಿದ್ದು, ಶೇಕಡಾ 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ನುಡಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ತೆರೆದ ಜೀಪಿನಲ್ಲಿ ಸಾಗಿ ವಿವಿಧ ಪಡೆಗಳಿಂದ ಗೌರವ ರಕ್ಷೆ
ಸ್ವೀಕರಿಸಿದರು. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್‌, ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ, ಗೃಹ ರಕ್ಷಕ ದಳ, ಮಾಜಿ ಸೈನಿಕ ತಂಡ ಹಾಗೂ ಅರಣ್ಯ ಇಲಾಖೆ ತಂಡ ನಡೆಸಿದ ಪಥಸಂಚಲನ ಎಲ್ಲರ ಗಮನ ಸೆಳೆಯಿತು.

ಶಾಸಕ ಪ್ರೀತಂ ಜೆ. ಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್,
ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ, ಪೊಲೀಸ್‌ ವರಿಷ್ಠಾಧಿಕಾರಿ ಆರ್.
ಶ್ರೀನಿವಾಸ್‍ಗೌಡ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ, ಉಪ ಅರಣ್ಯ ಸಂರಕ್ಷಣಾಧಿಕಾರಿ
ಕೆ.ಎನ್. ಬಸವರಾಜ್, ಮಾಜಿ ಉಪಮೇಯರ್ ಹೇಮಾವತಿ ಗೋಪಾಲಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.