ಹಾಸನ: ‘ನಗರದಲ್ಲಿ ನಿರ್ಮಾಣ ಆಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ₹ 63.34 ಕೋಟಿ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಆಡಳಿತಾತ್ಮಕ ಅನುಮೋದನೆ ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
‘ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಉದ್ದೇಶಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಹಿಂದೆಯೇ ಆರಂಭಿಸಲಾಗಿತ್ತು. ಆದರೆ ಅಗತ್ಯ ಅನುದಾನ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಹೀಗಾಗಿ ಆಸ್ಪತ್ರೆಗೆ ಬರುವ ರೋಗಿಗಳನ್ನು ಮಂಗಳೂರು, ಬೆಂಗಳೂರು ಸೇರಿದಂತೆ ಬೇರೆ ಆಸ್ಪತ್ರೆಗಳಿಗೆ ವರ್ಗಾಯಿಸಲಾಗುತ್ತಿದೆ. ಇದರಿಂದ ಬಡ ಜನರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ವಿಚಾರವನ್ನು ಹಾಸನ ಜಿಲ್ಲೆ ಸಂಸದರು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಗಮನಕ್ಕೆ ತಂದಿದ್ದರು’ ಎಂದು ಹೇಳಿದ್ದಾರೆ.
‘ಕೂಡಲೇ ಈ ಸಮಸ್ಯೆಗೆ ಪರಿಹಾರ ನೀಡುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿ ಗಮನಕ್ಕೆ ತಂದು, ಬಾಕಿ ಕಾಮಗಾರಿಗೆ ಅನುದಾನದ ಅವಶ್ಯಕತೆಯನ್ನು ಮನವರಿಕೆ ಮಾಡಿದ್ದೆ. ಮನವಿಗೆ ಸ್ಪಂದಿಸಿ, ಪರಿಹಾರ ನೀಡಲು ಸೂಚಿಸಿದ್ದಾರೆ’ ಎಂದು ಹೇಳಿದ್ದಾರೆ.
‘ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಬೇಕಾಗಿರುವ ಹೆಚ್ಚುವರಿ ಮೊತ್ತದ ಮಂಜೂರಾತಿಗಾಗಿ ಸಚಿವ ಸಂಪುಟದ ಮುಂದೆ ತರಲಾಗಿತ್ತು. ಈ ಬಗ್ಗೆ ಚರ್ಚೆ ನಡೆಸಿದ ಸಂಪುಟ ಸಭೆ ₹ 63.34 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ ಹಾಸನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.