
ಹಾಸನ: ಸುಪ್ರೀಂ ಕೋರ್ಟ್ ಆದೇಶದಂತೆ ತಾಲ್ಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಸ್ವರೂಪ್ ಪ್ರಕಾಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸ್ಥಳೀಯ ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದೆ. ಸ್ಥಳೀಯ ಆಡಳಿತ ಹಾಗೂ ಮಹಾನಗರ ಪಾಲಿಕೆ ಬೀದಿ ನಾಯಿಗಳನ್ನು ಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಯೋಜನೆಯ ಲಾಭ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಬೇಸಿಗೆ ಆರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
ಕಂದಾಯ, ಚೆಸ್ಕಾಂ, ಮುಜರಾಯಿ, ಕೃಷಿ, ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲೇಬೇಕಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಇಲ್ಲವಾದರೆ ವಿವಿಧ ರೋಗಗಳಿಗೆ ಜನರು ತುತ್ತಾಗಬೇಕಾಗುತ್ತದೆ. ಪ್ರಥಮ ಆದ್ಯತೆಯಾಗಿ ಪರಿಗಣಿಸಬೇಕು ಎಂದು ನಿರ್ದೇಶನ ನೀಡಿದರು.
ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಯೋಜನೆ ಅಡಿ ಕಾಮಗಾರಿಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗವಕಾಶ ಕಲ್ಪಿಸಿದಂತಾಗಲಿದೆ. ಗ್ರಾಮದ ಅಭಿವೃದ್ಧಿಯು ವೇಗ ಪಡೆಯಲಿದೆ ಎಂದರು.
ತಾಲ್ಲೂಕಿನಲ್ಲಿ ಸುಮಾರು 170ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಿದ್ದು, ಇವುಗಳನ್ನು ಸಕ್ಷಮ ಅಂಗನವಾಡಿಗಳಾಗಿ ಗುರುತಿಸಲಾಗಿದೆ. ನವೆಂಬರ್ 28ರಿಂದ ಹೊಸ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿಗಳಿಗೆ ಟಿವಿಗಳನ್ನು ವಿತರಿಸಿದರು.
ತಹಶೀಲ್ದಾರ್ ಗೀತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್, ಸದಸ್ಯರಾದ ಕರೀಗೌಡ, ಮಲ್ಲೇಗೌಡ ಹಾಗೂ ತಾಲ್ಲೂಕಿನ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.