
ಹಾಸನ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಅಭಿಯಾನ ಸಭೆಯಲ್ಲಿ ಮಾತನಾಡಿದ ಅವರು, ಗರ್ಭಿಣಿಯರ ಆರೋಗ್ಯದ ಬಗ್ಗೆ ಉದಾಸೀನ ಮಾಡದೇ ನಿಗದಿತ ಸಮಯದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಮುತುವರ್ಜಿ ವಹಿಸುವಂತೆ ತಿಳಿಸಿದರು.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಯಾವುದೇ ಮಗುವಿಗೆ ಲಸಿಕೆ ತಪ್ಪದಂತೆ ಕ್ರಮ ಕೈಗೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯದ ಸವಲತ್ತುಗಳು ದೊರೆಯುವಂತೆ ನೋಡಿಕೊಳ್ಳಬೇಕು. ಎಲ್ಲೆಲ್ಲಿ ತಪ್ಪುಗಳಾಗುತ್ತಿವೆಯೋ ಅವುಗಳನ್ನು ಸರಿಪಡಿಸಿ, ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಹಿಮ್ಸ್‌ನಲ್ಲಿ ವೈದ್ಯರು ಬೆಳಿಗ್ಗೆ ಬಂದು ಹಾಜರಾತಿ ಹಾಕಿ ಹೊರಗೆ ಹೋದರೆ, ಮಧ್ಯಾಹ್ನವೇ ಬರುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ನಿರ್ದೇಶಕರೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.
ಸಾರ್ವಜನಿಕರಿಗೆ ವೈದ್ಯರು ಸಿಗುವಂತೆ ಎಚ್ಚರ ವಹಿಸಬೇಕು. ಪ್ರಾಮಾಣಿಕವಾಗಿ ಆತ್ಮಸಾಕ್ಷಿಯಿಂದ ಕೆಲಸ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ರೀತಿಯ ಔಷಧಿಗಳ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನೀರಿನಿಂದ ಉಂಟಾಗುವ ರೋಗ ರುಜಿನಗಳನ್ನು ತಡೆಯಲು ಮುನ್ನೆಚ್ಚರಿಕೆ ವಹಿಸಬೇಕು. ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಸ್ವಾಮಿ, ಆರ್.ಸಿ.ಎಚ್. ಅಧಿಕಾರಿ ಡಾ.ಶಿವಶಂಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗಪ್ಪ, ಹಿಮ್ಸ್ ಪ್ರಸೂತಿ ವಿಭಾಗದ ತಜ್ಞ ಡಾ.ಮಂಜುನಾಥ್, ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ.ದೀಪ್ತಿ, ಜಿಲ್ಲಾ ಪ್ರಸೂತಿ ತಜ್ಞರ ಸಂಘದ ಅಧ್ಯಕ್ಷೆ ಡಾ.ಗಿರಿಜಾ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.