ಹಾಸನ: ನಂದಿನಿ ಹಾಲು ಮಾರಾಟದ ಬೂತ್‍ಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಅಂತಹ ಬೂತ್‍ಗಳ ಪರವಾನಗಿ ರದ್ದು ಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುತ್ತಿರುವುದು ಕಂಡುಬರುತ್ತಿದೆ. ಪೋಷಕರು ಹಾಗೂ ಶಿಕ್ಷಕ ವೃಂದ ಎಚ್ಚರವಹಿಸಿ, ಮಕ್ಕಳಿಗೆ ತಿಳಿವಳಿಕೆ ನೀಡಿ ಸರಿದಾರಿಯಲ್ಲಿ ನಡೆಯುವಂತೆ ಸಂಸ್ಕಾರ ಕಲಿಸಬೇಕು ಎಂದು ತಿಳಿಸಿದರು.
ಶಾಲಾ– ಕಾಲೇಜು ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಾವೆಲ್ಲ ವಿದ್ಯಾವಂತರೆ. ಆದರೆ ಪ್ರಾಮಾಣಿಕತೆ ಕಡಿಮೆಯಾಗಿದೆ ಎಂದ ಅವರು, ನನ್ನ ಕರ್ತವ್ಯ ಮತ್ತು ಸಾಮಾಜಿಕ ಜವಾಬ್ದಾರಿ ಏನು ಎಂಬುದನ್ನು ಅರಿತು ನಡೆಯಬೇಕು. ಎಲ್ಲ ನೀತಿ– ನಿಯಮಗಳು ಮನೆಯಿಂದಲೇ ಪ್ರಾರಂಭವಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು.
ತಂಬಾಕು ಉತ್ಪನ್ನಗಳ ಮಾರಾಟದ ಬಗ್ಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಹೆಚ್ಚಿನ ಗಮನಹರಿಸಿ, ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು ಎಂದರು.
ಸಾರ್ವಜನಿಕರು ಕೂಡ ಎಚ್ಚರಿಕೆ ವಹಿಸಬೇಕು. ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಬೇಕು. ಸ್ವತಃ ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಮನೋಭಾವವನ್ನು ಜನರು ಬೆಳೆಸಿಕೊಳ್ಳಬೇಕು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಮನುಷ್ಯರನ್ನು ಕೆಟ್ಟ ವ್ಯಸನಗಳಿಂದ ಹೊರತಂದು ಸರಿದಾರಿಗೆ ತರುವುದು ಬಹುಮುಖ್ಯ ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕುಸಿ.ಸತ್ಯಭಾಮಾ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.