ಹಾಸನ: ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಾಣ ಮಾಡಲಾಗುತ್ತಿರುವ ಮೇಲ್ಸೇತುವೆಯ ಕಾಮಗಾರಿ ಇನ್ನೂ ನನೆಗುದಿಗೆ ಬಿದ್ದಿದೆ. ಬಾಕಿ ಅನುದಾನ ಬಿಡುಗಡೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ನಗರದ ಜನರ ನಿತ್ಯದ ಬವಣೆ ನೀಗದಂತಾಗಿದೆ.
ಹಾಸನದ ನೂತನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕಳೆದ ವರ್ಷ ಇದೇ ಅವಧಿಗೆ ಮುಗಿದು ಸಾರ್ವಜನಿಕರ ಸೇವೆಗೆ ಲಭ್ಯವಾಗಬೇಕಾಗಿತ್ತು. ಆದರೆ, ಒಂದು ಬದಿಯ ಕಾಮಗಾರಿ ಮಾತ್ರ ಮುಗಿದಿದ್ದು, ಅನುದಾನದ ಕೊರತೆಯಿಂದ ಇನ್ನೊಂದು ಬದಿಯ ಕಾಮಗಾರಿ ಸ್ಥಗಿತಗೊಂಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 60:40 ಅನುಪಾತದ ಅನುದಾನದಲ್ಲಿ ₹ 42 ಕೋಟಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಗರದಲ್ಲಿ ನಡೆಯುತ್ತಿದೆ. ಈಗಾಗಲೇ ಒಂದು ಬದಿಯ ಕಾಮಗಾರಿ ಪೂರ್ಣಗೊಳಿಸಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ, ಇನ್ನೊಂದು ಬದಿಯ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ವಾಹನಗಳು ಮೇಲ್ಸೇತುವೆಯಲ್ಲಿ ಸಂಚರಿಸಬೇಕೋ, ಕೆಳಗಿನ ರಸ್ತೆಯಿಂದ ಸಂಚರಿಸಬೇಕೋ ಎನ್ನುವ ಜಿಜ್ಞಾಸೆ ಜನರನ್ನು ಕಾಡುತ್ತಿದೆ.
ಪರಸ್ಪರ ಬೊಟ್ಟು: ಇನ್ನೊಂದು ಬದಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ₹48 ಕೋಟಿ ಅನುದಾನದ ಅಗತ್ಯವಿದೆ. ಈ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕು. ಆದರೆ, ಅನುದಾನ ಬಿಡುಗಡೆ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಎನ್ನುವುದು ಜೆಡಿಎಸ್ ಮುಖಂಡರ ಆರೋಪ.
‘ಸದ್ಯಕ್ಕೆ ಅನುದಾನ ಸಿಗದೇ ಒಂದು ಬದಿಯ ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ಬಗ್ಗೆ ರೈಲ್ವೆ ಸಚಿವರಿಗೂ ಮನವಿ ಮಾಡಲಾಗಿದೆ. ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಸ್ಥಳೀಯ ಶಾಸಕ ಸ್ವರೂಪ್ ತಿಳಿಸಿದ್ದಾರೆ.
ಈ ಬಗ್ಗೆ ಈಚೆಗೆ ನಗರದಲ್ಲಿ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ‘ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ಕುರಿತು ಮನವಿ ಮಾಡಲಾಗಿದೆ. ಅಧಿವೇಶನ ಮುಗಿದ ನಂತರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.