ADVERTISEMENT

ಅಗತ್ಯ ಪ್ರಮಾಣದ ಲಸಿಕೆ ಪೂರೈಸಲು ಆಗ್ರಹ

ಡಿ.ಸಿ ಕಚೇರಿ ಎದುರು ಯುವ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 13:21 IST
Last Updated 11 ಆಗಸ್ಟ್ 2021, 13:21 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ಕೊರತೆ ಉಂಟಾಗಿದ್ದು, ಅಗತ್ಯ ಪ್ರಮಾಣದಲ್ಲಿ ರಾಜ್ಯ ಸರ್ಕಾರ ಲಸಿಕೆ ಪೂರೈಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲೆಯಲ್ಲಿ ಹೆಚ್ಚು ಜನ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಾರೆ. ಸಾಕಷ್ಟು ಜನರಿಗೆ ಕೋವಿಡ್‌ ಲಸಿಕೆ ಮೊದಲ ಡೋಸ್‌ ಸಹ ದೊರೆತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳದ ಕಾರಣ ಲಸಿಕೆ ಕೊರತೆ ಎದುರಿಸುವಂತಾಗಿದೆ. ಎರಡೂ ಸರ್ಕಾರಗಳು ಮುಖ್ಯಮಂತ್ರಿ ಬದಲಾವಣೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿ ರೈತರು ಹಾಗೂ ಸಾರ್ವಜನಿಕರ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜನರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಕೇವಲ ಮತ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ಕೋವಿಡ್‌ 3ನೇ ಆಲೆ ಆರಂಭವಾಗುವ ಆತಂಕ ಎದುರಾಗಿದೆ. ಮೂರನೇ ಅಲೆ ತಡೆಯಲು ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಜನರು ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ADVERTISEMENT

ಲಸಿಕಾ ಕೇಂದ್ರಗಳ ಎದುರು ನಿತ್ಯ ಜನರು ನಿಂತು ಲಸಿಕೆ ಸಿಗದೆ ಹಿಂತಿರುಗುತ್ತಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕ್ಷೇತ್ರದ ಶಾಸಕರು ಇದರ ಬಗ್ಗೆ ಧ್ವನಿ ಎತ್ತಬೇಕು. ಜಿಲ್ಲೆಗೆ ಅಗತ್ಯ ಇರುವಷ್ಟು ಲಸಿಕೆ ತರಿಸಿಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷ ಕೋಮಲೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್‌.ಡಿ.ರಂಗಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಫರಮಾನ್‌ ಅಹಮದ್, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅನಂತಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.