ADVERTISEMENT

ಮೂರನೇ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ

ಆತಂಕ ಪಡುವ ಅಗತ್ಯವಿಲ್ಲ: ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ ಗಿರೀಶ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 13:23 IST
Last Updated 5 ಫೆಬ್ರುವರಿ 2021, 13:23 IST
ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಕೋವಿಡ್‌ ಲಸಿಕೆ ಹಾಕಿಸಿಕೊಂಡರು.
ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಕೋವಿಡ್‌ ಲಸಿಕೆ ಹಾಕಿಸಿಕೊಂಡರು.   

ಹಾಸನ: ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಶುಕ್ರವಾರ ಕೋವಿಡ್-19 ಲಸಿಕೆ
ಹಾಕಿಸಿಕೊಂಡರು.

ಲಸಿಕೆ ಪಡೆದ ನಂತರ ಮಾತನಾಡಿದ ಅವರು, ‘ದೇಶದ್ಯಾದಂತ ಲಸಿಕೆ ಅಭಿಯಾನ ನಡೆಯುತ್ತಿದ್ದು,
ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ
ಕಾರ್ಯಕರ್ತೆಯರಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಹಾಕಿಸಿಕೊಂಡ ನನಗೆ ಯಾವುದೇ ಅಡ್ಡ
ಪರಿಣಾಮ ಉಂಟಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಸುಮಾರು 7
ಸಾವಿರದಷ್ಟು ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ
ಹಾಕಿಸಿಕೊಳ್ಳಬೇಕು’ ಎಂದು ಹೇಳಿದರು.

ಎರಡನೇ ಅಲೆ ತಡೆಯಲು ಲಸಿಕೆ ಪಡೆಯಲು ಸಿದ್ದರಿರಬೇಕು. ಕೋವ್ಯಾಕ್ಸಿನ್, ಕೋವಿಶೀಲ್ಡ್‌ ಲಸಿಕೆ
ಪೂರ್ಣ ಸುರಕ್ಷವಾಗಿದ್ದು, ಜನರು ಗಾಬರಿ ಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೂ
ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.

ADVERTISEMENT

ಲಸಿಕೆ ಪಡೆದವರು ಸಹ ಜಾಗೃತರಾಗಿ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಹಾಗೂ
ಸ್ಯಾನಿಟೈಸರ್ ಬಳಸಬೇಕು. 2ನೇ ಹಂತದಲ್ಲಿ ಆರೋಗ್ಯ ಸಿಬ್ಬಂದಿ ನಂತರ ಅರಣ್ಯ ಇಲಾಖೆ ನೌಕರರು,
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್ ಇಲಾಖೆ ನೌಕರರು, ಕಂದಾಯ ಇಲಾಖೆ, ಗ್ರಾಮೀಣ
ಭಾಗದಲ್ಲಿ ಕೆಲಸ ಮಾಡುವ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಜಿಲ್ಲಾ ಪಂಚಾಯಿತಿ ನೌಕರರ
ಮಾಹಿತಿಯನ್ನು ಈಗಾಗಲೇ ಸರ್ಕಾರಕ್ಕೆ ಕಳುಹಿಸಲಾಗಿದೆ. ಮುಂದಿನ ವಾರದಲ್ಲಿ ಲಸಿಕೆ ನೀಡಲು
ಸರ್ಕಾರದಿಂದ ನಿರ್ದೇಶನ ಬರಬಹುದು ಎಂದು ಹೇಳಿದರು.

3ನೇ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲು ಸಿದ್ಧತೆ ನಡೆಯುತ್ತಿದೆ. ಸರ್ಕಾರದ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೂ ಲಸಿಕೆ ನೀಡಲಾಗುತ್ತದೆ. ಈವರೆಗೂ ಶೇಕಡಾ 52 ರಷ್ಟು ಲಸಿಕೆ ನೀಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.
ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.