ADVERTISEMENT

ವಾಲ್ಮೀಕಿ ಸ್ವಾಮೀಜಿ ದೇವೇಗೌಡರ ಕ್ಷಮೆಯಾಚಿಸಲಿ

ನಗರದಲ್ಲಿ ಜೆಡಿಎಸ್‌ ಕಾರ್ಯಕರ್ತರು, ಒಕ್ಕಲಿಗರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 17:33 IST
Last Updated 27 ಜೂನ್ 2019, 17:33 IST
ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹಾಗೂ ಒಕ್ಕಲಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.
ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹಾಗೂ ಒಕ್ಕಲಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.   

‌‌ಹಾಸನ: ‘ಜೆಡಿಎಸ್ ನಾಯಕರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ವಾಲ್ಮೀಕಿ ಸಮಾಜದ ಪ್ರಸನ್ನಾನಂದ ಸ್ವಾಮೀಜಿ ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿ ನಗರದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹಾಗೂ ಒಕ್ಕಲಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಎನ್.ಆರ್. ವೃತ್ತದವರೆಗೆ ಮೆರವಣಿಗೆಯಲ್ಲಿ ಬಂದು ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರನ್ನು ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ರಾಜೇಗೌಡ ಮಾತನಾಡಿ, ‘ಕುಮಾರಸ್ವಾಮಿ ಮತ್ತು ದೇವೇಗೌಡರ ಬಗ್ಗೆ ಮಾತನಾಡಿರುವುದನ್ನು ಗಮನಿಸಿದರೆ ಪ್ರಸನ್ನಾಂದಪುರಿ ಅವರಿಗೆ ಸ್ವಾಮೀಜಿ ಆಗುವ ಅರ್ಹತೆ ಇದೆಯೇ ಎಂದು ಪ್ರಶ್ನಿಸಬೇಕಾಗುತ್ತದೆ. ಈ ರೀತಿ ಮಾತುಗಳನ್ನು ಅವರಿಂದ ನಿರೀಕ್ಷಿಸಿರಲಿಲ್ಲ. ಸ್ವಾಮೀಜಿ ಅವರು ತಮ್ಮ ನಡವಳಿಕೆ, ಹೇಳಿಕೆ ಹಾಗೂ ವರ್ತನೆ ತಿದ್ದುಕೊಳ್ಳಬೇಕು. ಸಮಾಜವೇ ನಿಮ್ಮನ್ನು ನಿರಾಕರಿಸಿದರೇ ಪರಿಸ್ಥಿತಿ ಏನಾಗುತ್ತದೆ ಎಂಬುದರ ಬಗ್ಗೆ ಯೋಚನೆ ಮಾಡಬೇಕು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಸಮಾಜವನ್ನು ತಪ್ಪು ದಾರಿಗೆ ಎಳೆಯಬಾರದು. ಕೂಡಲೇ ಮುಖಂಡರ ಕ್ಷಮೆ ಕೇಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಸಮಾಜಕ್ಕೆ ಮಾರ್ಗದರ್ಶಕರಾಗಬೇಕೇ ಹೊರತು ಕಂಟಕ ಆಗಬಾರದು’ ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ, ಮುಖಂಡರಾದ ಸಿ.ಆರ್. ಶಂಕರ್, ಕಮಲ್ ಕುಮಾರ್, ಅಗಿಲೆ ಯೋಗೀಶ್, ರವಿಶಂಕರ್, ನಿರ್ಮಲಾ, ಪ್ರೇಮಮ್ಮ, ಅಕ್ಮಲ್ ಅಹಮದ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.