ADVERTISEMENT

ಉಚಿತ ಬಸ್‌ಪಾಸ್‌ಗಾಗಿ ರಸ್ತೆ ತಡೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2018, 11:56 IST
Last Updated 12 ಜೂನ್ 2018, 11:56 IST

ಹಾವೇರಿ: ‘ಎಲ್ಲ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಬಸ್‌ಪಾಸ್‌ ನೀಡಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಗರದ ಘಟಕದ ವತಿಯಿಂದ ಸೋಮವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.

ವಿವಿಧ ಕಾಲೇಜು ವಿದ್ಯಾರ್ಥಿಗಳು ಹೊಸಮಠದಿಂದ ಸುಭಾಸ್‌ ವೃತ್ತ, ಎಂ.ಜಿ.ರಸ್ತೆ ಮಾರ್ಗವಾಗಿ ಜಾಥಾ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಬಂದು ಪ್ರತಿಭಟನೆ ನಡೆಸಿದರು

ಎಬಿವಿಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಕಿರಣ ಕೋಣವರ ಮಾತನಾಡಿ, ‘ರಾಜ್ಯ ಸರ್ಕಾರ ಎಲ್ಲ ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ಗಳನ್ನು ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಜಿಲ್ಲೆಯ ಕೆಲವು ಗ್ರಾಮಗಳಿಗೆ ಸರ್ಕಾರಿ ಬಸ್ ವ್ಯವಸ್ಥೆ ಇಲ್ಲ. ಅಂತಹ ಗ್ರಾಮಗಳ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳಿಗೆ ಹಣ ನೀಡಿಯೇ ಶಾಲಾ– ಕಾಲೇಜುಗಳಿಗೆ ನಿತ್ಯ ಬರಬೇಕಾಗಿದೆ. ಆದ್ದರಿಂದ, ಸರ್ಕಾರ ಕೂಡಲೇ ಅಂತಹ ಗ್ರಾಮಗಳಿಗೆ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ನಗರ ಘಟಕದ ಕಾರ್ಯದರ್ಶಿ ಪವನ್‌ ಕುಮಾರ ಮಾತನಾಡಿ, ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಿದೆ. ಇದನ್ನು ಎಲ್ಲರಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ, ಅಧಿಕಾರಕ್ಕೆ ಬಂದ ಬಳಿಕ ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಳ್ಳದೇ ಮಾತು ತಪ್ಪುತ್ತಿದ್ದಾರೆ ಎಂದು ಆರೋಪಿಸಿದರು.

ವಿದ್ಯಾರ್ಥಿನಿ ಸುಷ್ಮಿತಾ ಮಾತನಾಡಿ, ರಾಜ್ಯದಲ್ಲಿ ಬಸ್‌ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಭಾಗದವರೇ ಇದ್ದಾರೆ. ಅಲ್ಲದೇ, ಈಗಾಗಲೇ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ಜಿಲ್ಲೆಯ ಎಷ್ಟೋ ವಿದ್ಯಾರ್ಥಿಗಳಿಗೆ ಇನ್ನೂ ಬಸ್‌ಪಾಸ್‌ ವಿತರಣೆಯಾಗಿಲ್ಲ ಎಂದು ದೂರಿದರು.

ಎಬಿವಿಪಿ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಪಾಟೀಲ ಹಾಗೂ ಮುಖಂಡ ಡಾ.ಸಂತೋಶ ಆಲದಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.