ADVERTISEMENT

ಪುಣ್ಯಕೋಟಿ ಕೌಂಟರ್ ತಾಲ್ಲೂಕಿಗೂ ವಿಸ್ತರಿಸಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡಲು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಮೇ 2018, 9:27 IST
Last Updated 25 ಮೇ 2018, 9:27 IST

ಹಾವೇರಿ: ‘ಒಬ್ಬರಿಗೆ ಬೇಡವಾದ ವಸ್ತು ಮತ್ತೊಬ್ಬರಿಗೆ ಅವಶ್ಯವಾಗಿರುತ್ತದೆ. ಈ ಕಾರಣಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಿದ ‘ಪುಣ್ಯಕೋಟಿ ಕೌಂಟರ್‌’ ಅನ್ನು ತಾಲ್ಲೂಕು ಆಸ್ಪತ್ರೆಗಳಿಗೂ ವಿಸ್ತರಿಸಿ’ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ‘ಗ್ರಾಮ ಸ್ವರಾಜ್ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಭೆ’ಯಲ್ಲಿ ಅವರು ಮಾತನಾಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಇದರ ಜೊತೆಗೆ ವೈದ್ಯರು ಸ್ವಚ್ಛತೆ ಬಗ್ಗೆ ಕ್ರಮಕೈಗೊಳ್ಳಬೇಕು. ದಿನಕ್ಕೆ ಕನಿಷ್ಠ ಮೂರು ಬಾರಿಯಾದರೂ ಆಸ್ಪತ್ರೆಯನ್ನು ಸ್ವಚ್ಛಗೊಳಿಸಬೇಕು ಎಂದು ಸೂಚಿಸಿದರು.

ADVERTISEMENT

ಆಸ್ಪತ್ರೆ ಸ್ವಚ್ಛತೆಗೆ ಸಿಬ್ಬಂದಿ ಕೊರತೆಯಿದ್ದರೆ, ಲಭ್ಯವಿರುವ ಅನುದಾನದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಮೇಲೆ ಸಿಬ್ಬಂದಿ ನೇಮಕ ಮಾಡಿಕೊಂಡು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಿಥಿಲಗೊಂಡ ಕಟ್ಟಡಗಳ ದುರಸ್ತಿ ಮಾಡಬೇಕು. ಪೀಠೋಪಕರಣಗಳನ್ನು ನವೀಕರಣಗೊಳಿಸಿ, ಉತ್ತಮ ವಾತಾವರಣವನ್ನು ನಿರ್ಮಿಸಬೇಕು ಎಂದು ನಿರ್ದೇಶನ ನೀಡಿದರು.

ಆಸ್ಪತ್ರೆಯ ಆವರಣದಲ್ಲಿ ಮಾವು, ನೇರಲೆ, ಕಾಡು ಬಾದಾಮಿ ಸೇರಿದಂತೆ ಹಲವು ಗಿಡಗಳನ್ನು ನೆಟ್ಟು, ಉತ್ತಮ ವಾತಾವರಣ ನಿರ್ಮಿಸಬೇಕು. ಆಸ್ಪತ್ರೆಗಳ ವಾತಾವರಣವನ್ನು ಅತ್ಯಂತ ಅಚ್ಚುಕಟ್ಟಾಗಿ, ಶುಚಿಯಾಗಿ ನಿರ್ವಹಿಸಿದರೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುವುದು. ಅತ್ಯುತ್ತಮ ಮೂರು ಆಸ್ಪತ್ರೆಗಳನ್ನು ಆಯ್ಕೆ ಮಾಡಿ ಆಗಸ್ಟ್ 15 ರಂದು ಬಹುಮಾನ ನೀಡಲಾಗುವುದು ಎಂದರು.

ಕುಟುಂಬ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ಪುರುಷ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ಕುರಿತು ಜಾಗೃತಿ ಮೂಡಿಸಬೇಕು. ಸವಣೂರ ತಾಲ್ಲೂಕಿನಲ್ಲಿ ಆರೋಗ್ಯ ಕಾರ್ಯಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ತಾಯಿ ಮರಣದ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬಳಿಗೆ ಸರಿಯಾಗಿದ ಸ್ಪಂದನೆ ಸಿಗದೇ ಸಾವು ಸಂಭವಿಸಿದೆ. ಇದಕ್ಕೆ ಕಾರಣವಾದ ವೈದ್ಯೆಯ ವಿರುದ್ಧ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸರಿಗೆ ಸೂಚನೆ ನೀಡಿದರು.

ಜಿಲ್ಲೆಯನ್ನು ಕ್ಷಯ ಹಾಗೂ ಕುಷ್ಠ ರೋಗಮುಕ್ತ ಮಾಡಲು ಎಲ್ಲ ವೈದ್ಯಾಧಿಕಾರಿಗಳು ಸಮರೋಪಾದಿ
ಯಲ್ಲಿ ಕೆಲಸ ಮಾಡಬೇಕು. ಈ ರೋಗಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಡ್ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಟಿ.ನಾಗರಾಜ ನಾಯ್ಕ, ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ಇದ್ದರು.

**
ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಜೊತೆಗೆ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ವಿಶ್ವಾಸ ಮೂಡಿಸಬೇಕು
ಡಾ.ವೆಂಕಟೇಶ್ ಎಂ.ವಿ. ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.