ADVERTISEMENT

ಪ್ರೌಢಶಾಲಾ ಸಹ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ;ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2012, 9:00 IST
Last Updated 13 ಜುಲೈ 2012, 9:00 IST

ಹಾವೇರಿ: `ಪ್ರೌಢಶಾಲಾ ಸಹ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ ಜುಲೈ15ರಿಂದ 18ರವರೆಗೆ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದೇ ಕಟ್ಟು ನಿಟ್ಟಿನಿಂದ ವ್ಯವಸ್ಥಿತವಾಗಿ ನಡೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ~ ಎಂದು ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ಸಹ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದ ತಕ್ಷಣ ಸಂಬಂಧಿಸಿದ ಮಾಹಿತಿ ಕಾಣುವಂತೆ ಸೂಚನಾ ಫಲಕಗಳನ್ನು ಹಾಕಬೇಕು. ಸಿಬ್ಬಂದಿ ಪರೀಕ್ಷೆಯ ವೇಳೆ ಅಗತ್ಯವಿರುವ ನೀರಿನ ವ್ಯವಸ್ಥೆಯನ್ನು ಒದಗಿಸಬೇಕು ಎಂದರು.

ಪರೀಕ್ಷೆಯ ವೇಳೆಯಲ್ಲಿ ಏನಾದರೂ ಸಮಸ್ಯೆ ಅಥವಾ ಅನುಮಾನ ಬಂದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳವುದರ ಜೊತೆಗೆ ಪರೀಕ್ಷೆಯಲ್ಲಿ ಅಕ್ರಮ ತಡೆಗಟ್ಟುವುದು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳ ಸುತ್ತ ವ್ಯಕ್ತಿಗಳ ಸಂಚಾರ ಸ್ಥಗಿತಗೊಳಿಸಲು ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ, ಪರೀಕ್ಷೆ ನಡೆಯುವ ಕೇಂದಗಳ ಸುತ್ತ 200 ಮೀಟರ್ ಪ್ರವೇಶವನ್ನು ನಿರ್ಬಂಧಿತ ಪ್ರದೇದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಜಿ.ಜಗದೀಶ ಮಾತನಾಡಿ, ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತಲೂ ಯಾವುದೇ ಶಬ್ಧದ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
 
ಅಲ್ಲದೇ, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದ ಸೂಚಕ ಗಂಟೆ ಕೇಳುವಂತಿರಬೇಕು. ಅಭ್ಯರ್ಥಿಗಳು ನಕಲು ಮಾಡಲು ಪರೀಕ್ಷಾ ಸಿಬ್ಬಂದಿ ಅವಕಾಶ ನೀಡಿದಲ್ಲಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಡಿಡಿಪಿಐ ಎಸ್.ಬಿ.ಕೊಡ್ಲಿ ಮಾತನಾಡಿ, ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ತೊಂದರೆ ಉಂಟಾದಲ್ಲಿ  ಸಂಬಂಧಪಟ್ಟ ಅಧಿಕಾರಿಗಳ ಕೂಡಲೇ ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಗಮನಕ್ಕೆ ತರಬೇಕು. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಜಿಲ್ಲೆಯಲ್ಲಿ 48 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 14,400 ಅಭ್ಯರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಪರೀಕ್ಷೆಯ ಅಕ್ರಮಗಳನ್ನು ತಡೆಯಲು ಮುಂಜಾಗ್ರತೆ ಕ್ರಮವಾಗಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 48 ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಗೌಪ್ಯ ಸಾಮಗ್ರಿಗಳನ್ನು ತಲುಪಿಸಲು ನಾಲ್ಕು ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ 12 ಜನ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಪ್ರೊಬೇಷನರಿ ಉಪವಿಭಾಗಾಧಿಕಾರಿ ಮೋಹನಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಪ್ರಸನ್ನಕುಮಾರ, ಕೆ.ರಾಮಶೆಟ್ಟಿ, ಎಂ.ಎಸ್.ಬಾರ್ಕಿ, ಆನಂದ, ವಿ.ಎಂ.ಮಾಳಗಿಮನಿ, ಸರ್ವ ಶಿಕ್ಷಣ ಅಭಿಯಾನಾಧಿಕಾರಿ ಎಚ್.ಎಂ. ಖಾನ್, ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜ ಪ್ರಾಚಾರ್ಯ ಚೆನ್ನಪ್ಪ, ಜಿ.ಎಚ್. ಕಾಲೇಜಿನ ಪ್ರಾಚಾರ್ಯ ಮಲ್ಲಣ್ಣ, ವಿಷಯ ಪರಿವೀಕ್ಷಕ ಎಸ್.ಜಿ.ಕೋಟೆ ಸಭೆಯಲ್ಲಿ ಹಾಜರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.