ADVERTISEMENT

ಹೆಣ್ಣು ಅಬಲೆಯಲ್ಲ ಸಬಲೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2011, 6:15 IST
Last Updated 22 ಮಾರ್ಚ್ 2011, 6:15 IST

ಹಾವೇರಿ: ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಪುರುಷರಷ್ಟೇ ಸರಿಸಮಾನವಾಗಿ ಕಾರ್ಯ ನಿರ್ವಹಿಸುವ ಮೂಲಕ ಹೆಣ್ಣು ಅಬಲೆ ಅಲ್ಲ; ಸಬಲೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಂ. ಉದಾಸಿ ಹೇಳಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಆಯೋಗದ ಆಶ್ರಯದಲ್ಲಿ ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪಪದಲ್ಲಿ ಭಾನುವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆಯರು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸಲು ಸರ್ಕಾರ ಹಲವಾರು ಕಾನೂನುಗಳು ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗಪಡಿಸಿ ಕೊಳ್ಳುವ ಹೊಣೆಗಾರಿಕೆ ಮಹಿಳೆಯರ ಮೇಲಿದೆ’ ಎಂದರು. ‘ಕೆಲವೊಂದು ಕೌಟಂಬಿಕ ಕಲಹಗಳ ಪ್ರಕರಣಗಳಲ್ಲಿ ಮಹಿಳೆ ತನಗಿರುವ ಕಾನೂನಿನ ಚೌಕಟ್ಟನ್ನು ಮೀರಿರುವ ಪ್ರಸಂಗಗಳನ್ನು ನಾವು ಕಾಣುತ್ತಿದ್ದೇವೆ. ಅಂತಹುಗಳಿಗೆ ಮಹಿಳೆಯರು ಅವಕಾಶ ಕೊಡದೇ, ಕುಟುಂಬದ ನೆಮ್ಮದಿ ಹಾಗೂ ಗೌರವವನ್ನು ಕಾಯ್ದು ಕೊಳ್ಳುವುದರೊಂದಿಗೆ ಕಾನೂನಿನ ರಕ್ಷಣೆ ಮಾಡಬೇಕೆಂದು ತಿಳಿಸಿದರು.

‘ಇಂದು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಗೆ ಶೇ. 50ರಷ್ಟು ಮೀಸಲಾತಿ ನೀಡಿದ್ದು, ಜಿ.ಪಂ., ತಾ.ಪಂ. ಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಸ್ಥಾನ ಪಡೆದು ಮುಂಚೂಣಿಯಲ್ಲಿದ್ದಾರೆ. ತಮಗೆ ದೊರೆತಿರುವ ಅಧಿಕಾರದ ಜೊತೆಗೆ ಒಮ್ಮತ ಅಭಿಪ್ರಾಯದೊಂದಿಗೆ ಅಭಿವೃದ್ಧಿ ಕಡೆ ಗಮನ ಹರಿಸಬೇಕಾದ ಜವಾಬ್ದಾರಿ ಮಹಿಳೆಯರ ಮೇಲಿದೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರೂ ಓಲೆಕಾರ ಮಾತನಾಡಿ,  ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಸಹ ವಿದ್ಯಾವಂತರಾಗಿ ಪ್ರತಿಯೊಂದು ಕ್ಷೇತ್ರಗಳಲ್ಲಿ ಮುನ್ನುಗ್ಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಭೋಜರಾಜ ಕರೂದಿ, ಜಿ.ಪಂ. ಅಧ್ಯಕ್ಷ ಮಂಜುನಾಥ ಓಲೇಕಾರ, ಜಿ.ಪಂ. ಸದಸ್ಯೆ ಸುಜಾತ ಕೊಟ್ಟಗಿಮನಿ, ನಗರಸಭೆ ಉಪಾಧ್ಯಕ್ಷೆ ಲಲಿತಾ ಗುಂಡೇನಹಳ್ಳಿ, ತಾಪಂ.ಅಧ್ಯಕ್ಷ ಚನಬಸಪ್ಪ ಅರಳಿ  ಹಾಜರಿದ್ದರು. 

ಇದೇ ಸಂದರ್ಭದಲ್ಲಿ ಸ್ತ್ರೀ ಶಕ್ತಿ ಗುಂಪಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿ ಮತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ನಂತರ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ವತಿಯಿಂದ ನಡೆದ ವಿವಿಧ ಸ್ಪರ್ಧೆಗಳು ಎಲ್ಲರ ಗಮನ ಸೆಳೆದವು. ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪ್ರಭಾವತಿ ಕರ್ನಿಂಗ ಸ್ವಾಗತಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.