ADVERTISEMENT

ಹಾವೇರಿ: ಜಿಲ್ಲೆಯಲ್ಲಿ 11,712 ವಿದ್ಯಾರ್ಥಿಗಳು ನೋಂದಣಿ

ಮಾರ್ಚ್ 20ರಂದು ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2022, 14:33 IST
Last Updated 18 ಮಾರ್ಚ್ 2022, 14:33 IST
ವಸತಿ ಶಾಲಾ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ತಾಲ್ಲೂಕು ಆಡಳಿತಗಳೊಂದಿಗೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ಅವರು ವಿಡಿಯೊ ಸಂವಾದ ನಡೆಸಿದರು 
ವಸತಿ ಶಾಲಾ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ತಾಲ್ಲೂಕು ಆಡಳಿತಗಳೊಂದಿಗೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ಅವರು ವಿಡಿಯೊ ಸಂವಾದ ನಡೆಸಿದರು    

ಹಾವೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ವಿವಿಧ ವಸತಿ ಶಾಲೆಗಳಲ್ಲ್ಲಿ 6ನೇ ತರಗತಿ ಪ್ರವೇಶಕ್ಕೆ ಮಾರ್ಚ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. 11,712 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಸುಗಮ, ವ್ಯವಸ್ಥಿತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಸೂಚನೆ ನೀಡಿದರು.

ವಸತಿ ಶಾಲಾ ಪ್ರವೇಶ ಪರೀಕ್ಷೆ ಕುರಿತಂತೆ ತಾಲ್ಲೂಕು ಆಡಳಿತದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಶುಕ್ರವಾರ ಪೂರ್ವ ಸಿದ್ಧತೆ ಕುರಿತಂತೆ ವಿಡಿಯೊ ಸಂವಾದದ ಮೂಲಕ ಅವರು ಮಾಹಿತಿ ಪಡೆದರು.

ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿ ಜೆರಾಕ್ಸ್ ಮತ್ತು ಸೈಬರ್ ಕೆಫೆಗಳನ್ನು ಮುಚ್ಚಿಸಲು ಆದೇಶಿಸಲಾಗುವುದು. ಸೂಕ್ತ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಮೂಲಸೌಕರ್ಯ ಕೊರತೆಯಾಗದಂತೆ ಕ್ರಮವಹಿಸಬೇಕು. ಮಕ್ಕಳು ಮನಸ್ಸು ಅತ್ಯಂತ ಸೂಕ್ಷ್ಮವಾಗಿದ್ದು, ಪರಿಸ್ಥಿತಿಯನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಬೇಕು. ಯಾವುದೇ ಲೋಪವಿಲ್ಲದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಸಲು ಕೊಠಡಿಯ ಮೇಲ್ವಿಚಾರಕರು ಹಾಗೂ ಕೆಳಹಂತದ ಸಿಬ್ಬಂದಿ ನೌಕರರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ನಿಷೇಧ: ಪರೀಕ್ಷಾ ಕೊಠಡಿಯೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪ್ಲೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲ್ಕುಲೇಟರ್‌ ಹಾಗೂ ಸ್ಮಾರ್ಟ್‍ವಾಚ್‍ಗಳನ್ನು ವಿದ್ಯಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೊಠಡಿಯೊಳಗೆ ತರದಂತೆ ನಿಷೇಧಿಸಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಉಮೇಶಪ್ಪ ಮಾತನಾಡಿ, ಜಿಲ್ಲೆಯ ಹಾನಗಲ್‍ನಲ್ಲಿ 10, ಹಾವೇರಿ , ಹಿರೇಕೆರೂರು, ರಾಣೇಬೆನ್ನೂರ ತಾಲ್ಲೂಕಿನಲ್ಲಿ ತಾಲ್ಲೂಕಿನಲ್ಲಿ ತಲಾ 5, ಬ್ಯಾಡಗಿ, ಸವಣೂರು ಹಾಗೂ ಶಿಗ್ಗಾವಿಯಲ್ಲಿ ತಲಾ 3 ಪರೀಕ್ಷಾ ಕೇಂದ್ರಗಳು ಸೇರಿದಂತೆ 34 ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಮಾರ್ಚ್‌ 20ರಂದು ಭಾನುವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಪ್ರತಿ ಕೇಂದ್ರಕ್ಕೆ ಒಬ್ಬರಂತೆ 34 ಜನರನ್ನು ಪರೀಕ್ಷಾ ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆ ಸ್ವೀಕೃತಿ ಮತ್ತು ವಿತರಣೆಗೆ ತ್ರಿಸದಸ್ಯ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.