ADVERTISEMENT

ಯುದ್ಧೋಪಾದಿಯಲ್ಲಿ ಸಿದ್ಧತೆಯಲ್ಲಿ ತೊಡಗಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 9:37 IST
Last Updated 10 ಜನವರಿ 2018, 9:37 IST

ಹಿರೇಕೆರೂರ: ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಅಧಿಕಾರಕ್ಕೆ ತರಲು ಕಾರ್ಯಕರ್ತರು ಯುದ್ಧೋಪಾದಿ ಸಿದ್ಧತೆಯಲ್ಲಿ ತೊಡಗಬೇಕು’ ಎಂದು ಶಾಸಕ ಯು.ಬಿ.ಬಣಕಾರ ಕರೆ ನೀಡಿದರು.
ಪಟ್ಟಣದ ತರಳಬಾಳು ಸಾಂಸ್ಕೃತಿಕ ಕೇಂದ್ರದಲ್ಲಿ ಸೋಮವಾರ ನಡೆದ ಹಿರೇಕೆರೂರ ಮಂಡಲದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳುಗಳನ್ನು ಹೇಳುತ್ತ, ಜನರ ದುಡ್ಡಿನಲ್ಲಿ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಅವರ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಪರಿವರ್ತನಾ ಯಾತ್ರೆಯಿಂದ ರಾಜ್ಯದಲ್ಲಿ ಬಿಜೆಪಿ ಅಲೆ ಪ್ರಬಲವಾಗಿ ಬೀಸುತ್ತಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಆರ್.ಅಂಗಡಿ ಮಾತನಾಡಿ, ‘ವೀರಶೈವ–ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಜಾತಿ ಮತ್ತು ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಜನರೇ ಅವರಿಗೆ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ’ ಎಂದರು.

ADVERTISEMENT

ಬಿಜೆಪಿ ಸಹಕಾರಿ ಪ್ರಕೋಷ್ಠ ಮುಖಂಡ ಎಸ್.ಎಸ್.ಪಾಟೀಲ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಹೇಶ ಗುಬ್ಬಿ, ಜಿಲ್ಲಾ ಪಂಚಾಯ್ತಿ ಸದಸ್ಯ ಎನ್.ಎಂ.ಈಟೇರ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ, ಕೆಎಂಎಫ್‌ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಹೇಮಣ್ಣ ಮುದಿರೆಡ್ಡೇರ, ರಾಜು ಬಣಕಾರ, ಮಹೇಂದ್ರ ಬಡಳ್ಳಿ, ಬಿ.ಎಸ್.ಪಾಟೀಲ, ಅಲ್ಲಾಬಕ್ಷ ಕನವಳ್ಳಿ, ನಿಂಗಪ್ಪ ಚಳಗೇರಿ, ಎಸ್.ವಿ.ಪಾಟೀಲ ಉಪಸ್ಥಿತರಿದ್ದರು. ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಷಣ್ಮುಖಯ್ಯ ಮಳಿಮಠ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.