ADVERTISEMENT

‘ದಿಶಾ’ ಸಮಿತಿಯ ತ್ರೈಮಾಸಿಕ ಸಭೆ: ಫಲಾನುಭವಿಗಳಿಗೆ ಹಣ ಮಂಜೂರು ಮಾಡಿ

ಸಂಸದ ಶಿವಕುಮಾರ ಉದಾಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 16:40 IST
Last Updated 11 ಜನವರಿ 2021, 16:40 IST
ಶಿವಕುಮಾರ ಉದಾಸಿ, ಸಂಸದ
ಶಿವಕುಮಾರ ಉದಾಸಿ, ಸಂಸದ   

ಹಾವೇರಿ: ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಹಾಗೂ ತೋಟಗಾರಿಕೆ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಂಸದ ಶಿವಕುಮಾರ ಉದಾಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ‘ದಿಶಾ’ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು. ಈ ಯೋಜನೆಯಡಿ ಶಾಲಾ ಕಂಪೌಂಡ್‌, ಮೈದಾನ ಹಾಗೂ ಶೌಚಾಲಯ ನಿರ್ಮಿಸಲು ಅವಕಾಶವಿದ್ದು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

‘ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳಿಗೆ ಹಣ ಬಂದಿಲ್ಲ ಎಂದು ದೂರುಗಳು ಕೇಳಿಬರುತ್ತಿವೆ. ಯೋಜನೆಗೆ ಹಣಕಾಸಿನ ಕೊರತೆ ಇಲ್ಲ. ಕೂಡಲೇ ಫಲಾನುಭವಿಗಳಿಗೆ ಹಣ ಮಂಜೂರು ಮಾಡುವ ಕಾರ್ಯವಾಗಬೇಕು. ಈಗಾಗಲೇ ನಿವೇಶನ ರಹಿತ ಹಾಗೂ ಮನೆ ರಹಿತರ ಸರ್ವೆ ಮಾಡಲಾಗಿದೆ. ಅಂದಾಜು 85 ಸಾವಿರ ಫಲಾನುಭವಿಗಳನ್ನು ಗುರುತಿಸಲಾಗಿದೆ. ಮನೆ ಇಲ್ಲದವರಿಗೆ ಹಾಗೂ ನಿವೇಶನ ಹೊಂದಿದ ಫಲಾನುಭವಿಗಳಿಗೆ ಬರುವ ಮೂರು ವರ್ಷಗಳಲ್ಲಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್‌ ರೋಶನ್ ಮಾತನಾಡಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ದೀನ ದಯಾಳ ಯೋಜನೆಯಡಿ ಮೂರು ಸಂಸ್ಥೆಗಳಲ್ಲಿ 488 ತರಬೇತಿ ಪಡೆದ ಅಭ್ಯರ್ಥಿಗಳ ಪೈಕಿ 477 ಅಭ್ಯರ್ಥಿಗಳು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಜಲಜೀವನ ಮಿಷನ್ ಯೋಜನೆಯಡಿ ಜಿಲ್ಲೆಯ 622 ಹಳ್ಳಿಗಳಿಗೆ ಮನೆ– ಮನೆಗೆ ನೀರಿನ ಸಂಪರ್ಕ ಕಲ್ಪಿಸಬೇಕಾಗಿದೆ. ಮೊದಲ 492 ಗ್ರಾಮಗಳನ್ನು ಗುರುತಿಸಲಾಗಿದೆ. ಈಗಾಗಲೇ 365 ಗ್ರಾಮಗಳ ಸರ್ವೆ ಮಾಡಲಾಗಿದೆ. ಉಳಿದಂತೆ ಹಂತ– ಹಂತವಾಗಿ ಮಾಡಲಾಗುವುದು. ನಾಲ್ಕೈದು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಮನೆಗೆ ನಲ್ಲಿ ನೀರು ಪೂರೈಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಬಾನುವಳ್ಳಿ, ಉಪವಿಭಾಗಾಧಿಕಾರಿಗಳಾದ ಡಾ.ದಿಲೀಷ್ ಶಶಿ ಹಾಗೂ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.