ADVERTISEMENT

ಯುವ ಪ್ರತಿಭೆಗಳಿಗೆ ಕಲಾ ತರಬೇತಿ

ಯಕ್ಷಗಾನ ತರಬೇತಿ ಶಿಬಿರ ಸಮಾರೋಪ ಸಮಾರಂಭ: ಸಚಿವ ಕೋಟ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 15:28 IST
Last Updated 6 ಆಗಸ್ಟ್ 2022, 15:28 IST
ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಯಕ್ಷಗಾನ ತರಬೇತಿ ಶಿಬಿರ ಸಮಾರೋಪ ಸಮಾರಂಭ ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ನೆಹರು ಓಲೇಕಾರ, ಕಸಾಪ ಅಧ್ಯಕ್ಷ ಮಹೇಶ ಜೋಶಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದಾರೆ 
ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಯಕ್ಷಗಾನ ತರಬೇತಿ ಶಿಬಿರ ಸಮಾರೋಪ ಸಮಾರಂಭ ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ನೆಹರು ಓಲೇಕಾರ, ಕಸಾಪ ಅಧ್ಯಕ್ಷ ಮಹೇಶ ಜೋಶಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದಾರೆ    

ಹಾವೇರಿ: ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಪ್ರತಿಭೆಗಳಿಗೆ ಯಕ್ಷಗಾನ ಸೇರಿದಂತೆ ಅಪರೂಪದ ಕಲೆಗಳ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕು ಬದಲಾಯಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಸರ್ಕಾರ ಮಾಡುತ್ತಿದೆ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಯಕ್ಷಗಾನ ತರಬೇತಿ ಶಿಬಿರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮ ಸಮಾಜಕ್ಕೆ ಶ್ರಮಿಸಿದ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿರುವುದು ನೋಡಿದರೆ ರೋಮಾಂಚನವಾಗುತ್ತದೆ. ಒಂದು ಕಾಲದಲ್ಲಿ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ದೊಡ್ಡವರಿಗೆ ಮಾತ್ರ ಲಭಿಸುತ್ತಿದ್ದವು. ಬದಲಾವಣೆ ಕಾಲಘಟ್ಟದಲ್ಲಿ ಸಾಲುಮರದ ತಿಮ್ಮಕ್ಕ, ತುಳಸಿಗೌಡ ಹಾಗೂ ಸೂಲಗಿತ್ತಿ ನರಸಮ್ಮನಂತವರಿಗೆ ಭಾರತ ಸರ್ಕಾರ ಕರೆದು ಪ್ರಶಸ್ತಿ ನೀಡುವಷ್ಟು ಬದಲಾವಣೆಯಾಗಿದೆ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಶಾಸಕ ನೆಹರು ಓಲೇಕಾರ ಮಾತನಾಡಿ, ರಾಜ್ಯದ ವಸತಿ ಶಾಲೆಗಳಲ್ಲಿ ಓಬವ್ವ ಆತ್ಮ ರಕ್ಷಣೆ ಕಲೆ ಕರಾಟೆ ತರಬೇತಿ ಆರಂಭಿಸಿರುವಂತೆ ಯಕ್ಷಗಾನ ತರಬೇತಿ ಆರಂಭಿಸಬೇಕು ಹಾಗೂ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ವಸತಿ ಶಾಲೆ ಆರಂಭಿಸುವಂತೆ ಸಚಿವರಿಗೆ ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವರು ಎರಡು ಕಾರ್ಯಗಳನ್ನು ಮಾಡುವುದಾಗಿ ಭರವಸೆ ನೀಡಿದರು.

ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು. ಶಮಂತಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿವರು ಹಾಗೂ ಶಾಸಕರು ಯಕ್ಷಗಾನ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮಂಡಳಿ ನಿರ್ದೇಶಕರಾದ ಊರ್ಮಿಳಾ, ಕೆ.ಎಲ್.ಇ.ಸಂಸ್ಥೆ ಬೆಳಗಾವಿ ಆಡಳಿತ ಮಂಡಳಿ ನಿರ್ದೇಶಕ ಎಂ.ಸಿ.ಕೊಳ್ಳಿ, ಜಿ.ಎಚ್.ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎಲ್. ಬಾಲೇಹೊಸೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ನಗರಸಭೆ ಸದಸ್ಯ ಗಿರೀಶ ತುಪ್ಪದ, ಸಿದ್ಧರಾಜ ಕಲಕೋಟಿ ಇದ್ದರು. ಪ್ರಾಚಾರ್ಯರಾದ ಡಾ.ಸಂಧ್ಯಾ ಆರ್.ಕುಲಕರ್ಣಿ ಸ್ವಾಗತಿಸಿದರು.

***

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಕ್ಷಗಾನ ಕಲೆಗೆ ಸಿಗಬೇಕಾದ ಗೌರವ ಒದಗಿಸುವ ಕೆಲಸವನ್ನು ಮಾಡಲಾಗುವುದು
– ಮಹೇಶ ಜೋಶಿ, ಕಸಾಪ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.