ADVERTISEMENT

ಮಾಸಿಕ ಗೌರವಧನ ಹೆಚ್ಚಳಕ್ಕೆ ಆಗ್ರಹ

ಕೋವಿಡ್‌ ಸುರಕ್ಷತಾ ಸಾಧನ ಪೂರೈಸಿ: 20ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 14:01 IST
Last Updated 29 ಜುಲೈ 2020, 14:01 IST
ಹಾವೇರಿ ಜಿಲ್ಲಾಧಿಕಾರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು ತಹಶೀಲ್ದಾರ್‌ ಶಂಕರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು 
ಹಾವೇರಿ ಜಿಲ್ಲಾಧಿಕಾರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು ತಹಶೀಲ್ದಾರ್‌ ಶಂಕರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು    

ಹಾವೇರಿ:ಮಾಸಿಕ ₹12 ಸಾವಿರ ಗೌರವಧನ ನೀಡಬೇಕು ಮತ್ತು ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ದೇವಗಿರಿ ಸಮೀಪದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯದಾದ್ಯಂತ ಜೂನ್ 30ರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸಿ, ಅಧಿಕಾರಿಗಳು ಮತ್ತು ಸಚಿವರಿಗೆ ಖುದ್ದಾಗಿ ಮನವಿ ಸಲ್ಲಿಸಿದ್ದೇವೆ.ಈವರೆಗೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಇರುವುದಿಲ್ಲ. ಆದ್ದರಿಂದ ಅನಿವಾರ್ಯವಾಗಿ ರಾಜ್ಯದಾದ್ಯಂತ ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಹೋರಾಟ ಇಂದಿಗೆ 20ನೇ ದಿನಕ್ಕೆ ಕಾಲಿಟ್ಟಿದೆ ಎಂದು ತಿಳಿಸಿದರು.

ನಮ್ಮ ಜೀವವನ್ನು ಪಣಕ್ಕಿಟ್ಟು, ಕೋವಿಡ್ –19 ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇವೆ. ದುಡಿಮೆಗೆ ತಕ್ಕ ಪ್ರತಿಫಲವಿಲ್ಲದೆ ಅನಿಶ್ಚಿತ ವೇತನದಿಂದ ಹೈರಾಣಾಗಿದ್ದೇವೆ. ಸರ್ಕಾರ ಕೂಡಲೆ ಗೌರವಧನ ಹಾಗೂ ಪ್ರೋತ್ಸಾಹಧನ ಎರಡನ್ನೂ ಸೇರಿಸಿ ಮಾಸಿಕ ಕನಿಷ್ಠ ₹12 ಸಾವಿರ ವೇತನವನ್ನು ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್‌ ಎಸ್‌.ಶಂಕರ್‌ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟಕರಾದ ಭವಾನಿ ಶಂಕರ್‌, ಜಿಲ್ಲಾ ಸಂಘದ ಅಧ್ಯಕ್ಷರಾದ ಜಯಶೀಲಾ ಬಂಕಾಪುರಮಠ, ರೂಪಾ ಮಾನೆ, ಲೀಲಾವತಿ ಕಳ್ಳಿಮನಿ, ಬಸಮ್ಮ ಬಸ್ತಿ ಮುಂತಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.