ADVERTISEMENT

ಹಾವೇರಿ: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ: ಮಾಸಿಕ ವೇತನ ಹೆಚ್ಚಳಕ್ಕೆ ಆಗ್ರಹ

‘ಆಶಾ’ಗಳಿಗೆ ಸೋಂಕು: ಸರ್ಕಾರವೇ ಹೊಣೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 13:18 IST
Last Updated 10 ಜುಲೈ 2020, 13:18 IST
ಹಾವೇರಿ ನಗರದಲ್ಲಿ ಶುಕ್ರವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುವ ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಅಹವಾಲು ಆಲಿಸಿದರು 
ಹಾವೇರಿ ನಗರದಲ್ಲಿ ಶುಕ್ರವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುವ ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಅಹವಾಲು ಆಲಿಸಿದರು    

ಹಾವೇರಿ: ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಆರೋಗ್ಯ ಸೇವೆ ಸ್ಥಗಿತಗೊಳಿಸಿದ ಆಶಾ ಕಾರ್ಯಕರ್ತೆಯರು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷೆ ಜಯಶೀಲಾ ಬಂಕಾಪುರಮಠ ಮಾತನಾಡಿ, ‘ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಸಚಿವರು, ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್‌ ಅವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಜನವರಿಯಿಂದ 10 ಮನವಿ ಪತ್ರವನ್ನು ಸಲ್ಲಿಸಿದ್ದರೂ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ರಾಜ್ಯ ಸರ್ಕಾರ ಸಭೆ ಕರೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ನಮ್ಮ ಬೇಡಿಕೆಗೆ ಸ್ಪಂದಿಸದ ಕಾರಣ, ಅನಿವಾರ್ಯವಾಗಿ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ, ಹೋರಾಟಕ್ಕೆ ಧುಮುಕಿದ್ದೇವೆ. ಇದು ಕೊರೊನಾ ಸಮಯದಲ್ಲಿ ಎತ್ತಿಕೊಂಡ ಬೇಡಿಕೆಯಲ್ಲ. ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆ ಸೇರಿಸಿ ಮಾಸಿಕ ₹12,000 ವೇತನ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಘೋಷಿಸಿದ ₹2 ಸಾವಿರ, ರಾಜ್ಯ ಸರ್ಕಾರದ ಸಹಕಾರ ಸಂಘಗಳಿಂದ ಕೊಡುವ ₹3 ಸಾವಿರ ಹಣವು ಎಲ್ಲ ಆಶಾ ಕಾರ್ಯಕರ್ತೆಯರಿಗೆ ಸರಿಯಾಗಿ ತಲುಪಿಲ್ಲ. ಮಾಸ್ಕ್‌, ಸ್ಯಾನಿಟೈಸರ್‌ಗಳನ್ನು ಸಾಕಷ್ಟು ನೀಡಿಲ್ಲ.ಇದರಿಂದ ಜಿಲ್ಲೆಯ 17 ಆಶಾ ಕಾರ್ಯಕರ್ತೆಯರಿಗೆ ಸೋಂಕು ತಗುಲಿದೆ. ಇದಕ್ಕೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಲೀಲಾ ಕಟ್ಟೀಮನಿ, ಪ್ರಭಾವತಿ, ರೇಣುಕಾ ಎಸ್‌.ಬಡಿಗೇರ, ರತ್ನಾ ಗಿರಣಿ, ಮಂಗಳಾ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.