ಹಾವೇರಿ: ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಬಿಜೆಪಿ ಮುಖಂಡ ಬಿ.ಸಿ. ಪಾಟೀಲ ಅವರು ಸಂಸದ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಪಾಟೀಲ ಅವರ ‘ಫೇಸ್‌ಬುಕ್’ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಬಿ.ಸಿ. ಪಾಟೀಲ ಅವರು ಇತ್ತೀಚೆಗೆ ದೆಹಲಿಗೆ ತೆರಳಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭೇಟಿಯಾಗಿ, ರಾಣೆಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂದದ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಅವಕಾಶ ಸಿಗದಿದ್ದಕ್ಕೆ ಬೇಸರ ಹೊರಹಾಕಿದ್ದಾರೆ.
‘ಇಂದು ದೆಹಲಿಯಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಆತ್ಮಿಯವಾಗಿ ಭೇಟಿ ಮಾಡಿ ಸನ್ಮಾನಿಸಲಾಯಿತು. ಬೈಂದೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ದುರಾದೃಷ್ಟಕರವೆನೆಂದರೆ ನಮ್ಮ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವಕಾಶ ನೀಡಲಿಲ್ಲ’ ಎಂದು ಬಿ.ಸಿ. ಪಾಟೀಲ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಈ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಹಲವರು, ‘ಬಿ.ಸಿ.ಪಾಟೀಲ ಹಾಗೂ ಬಸವರಾಜ ಬೊಮ್ಮಾಯಿ ಇಬ್ಬರ ನಡುವೆಯೂ ಏನು ಜಗಳ ನಡೆದಿದೆ ಎಂಬುದು ಗೊತ್ತಾಗುತ್ತಿದೆ’ ಎಂದಿದ್ದಾರೆ. ‘ಬೊಮ್ಮಾಯಿ ಅವರು ನಿಮಗೆ ಸಿಕ್ಕಿಲ್ಲ. ಸಾಮಾನ್ಯ ಜನರ ಗತಿ ಏನು’ ಎಂದು ಕೆಲವರು ಪ್ರಶ್ನಿಸಿದ್ದಾರೆ.
ಫೇಸ್‌ಬುಕ್ ಪೋಸ್ಟ್ ಬಗ್ಗೆ ಪ್ರತಿಕ್ರಿಯೆ ಪಡೆಯಲು ಬಿ.ಸಿ.ಪಾಟೀಲ ಅವರು ಲಭ್ಯರಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.