ADVERTISEMENT

ಕಪ್ಪು ಶಿಲೀಂಧ್ರ: ಪ್ರತ್ಯೇಕ ವಾರ್ಡ್‌ ತೆರೆಯಿರಿ

ಸೋಂಕಿಗೆ ಅಗತ್ಯವಾದ ಔಷಧ ಸಂಗ್ರಹ ಮಾಡಿಕೊಳ್ಳಿ: ಸಚಿವ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 22 ಮೇ 2021, 13:39 IST
Last Updated 22 ಮೇ 2021, 13:39 IST
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಸೆಮಿ ವೆಂಟಿಲೇಟರ್‌ಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಿದರು
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಸೆಮಿ ವೆಂಟಿಲೇಟರ್‌ಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಿದರು   

ಹಾವೇರಿ: ಕಪ್ಪು ಶಿಲೀಂಧ್ರ (ಬ್ಲಾಕ್ ಫಂಗಸ್) ಸೋಂಕಿಗೆ ತುತ್ತಾಗಿರುವವರ ಚಿಕಿತ್ಸೆಗಾಗಿ ‘ಪ್ರತ್ಯೇಕ ವಾರ್ಡ್’ ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.ಈ ಸೋಂಕಿಗೆ ಚಿಕಿತ್ಸೆ ನೀಡಲು ಬೇಕಾದ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹ ಮಾಡಿ ಇಟ್ಟುಕೊಳ್ಳಬೇಕೆಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂದಿನ ದಿನಗಳಲ್ಲಿ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಉಂಟು ಮಾಡಲಿದೆ ಎನ್ನಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಆರೋಗ್ಯ ಇಲಾಖೆ ಸಿದ್ಧವಾಗಬೇಕು. ಮಕ್ಕಳ ವಾರ್ಡ್‌ಗಳನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡಬೇಕು. ಆ ವಾರ್ಡ್‌ನಲ್ಲಿ ಐಸಿಯು ಚಿಕಿತ್ಸಾ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ADVERTISEMENT

ಜಿಲ್ಲೆಗೆ ಈಗಾಗಲೇ 1000 ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಮಂಜೂರಾಗಿದೆ. ಕಾಮಗಾರಿಯನ್ನು ಬೇಗ ಮುಗಿಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಇನ್ನೊಂದು 1000 ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಅನ್ನು ಜಿಲ್ಲೆಗೆ ತರಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ವೈದ್ಯರಿಗೆ ಕಿವಿಮಾತು:ಸೋಂಕಿತರು ಗುಣಮುಖರಾದ ನಂತರ ಅವರ ಆರೋಗ್ಯದ ಮೇಲೆ ಸದಾ ನಿಗಾ ಇರಿಸಬೇಕು. ಅವರನ್ನು ಕಾಲಕಾಲಕ್ಕೆ ತಪಾಸಣೆ ಮಾಡುವ ವ್ಯವಸ್ಥೆ ಮಾಡಿ. ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡುವ ಸಂದರ್ಭದಲ್ಲಿಯೇ ಆ ವ್ಯಕ್ತಿಯ ಆರೋಗ್ಯದ ತೀವ್ರತೆಯನ್ನು ಗುರುತಿಸಿ. ಮೈಲ್ಡ್‌ ಮತ್ತು ಮಾಡ್ರೆಟ್‌ ಸೋಂಕಿತರನ್ನು ಯೋಜನಾಬದ್ಧವಾಗಿ ವಿಂಗಡನೆ ಮಾಡಿ. ಆಕ್ಸಿಜನ್ ಅನ್ನು ಸಮರ್ಪಕವಾಗಿ ಬಳಕೆ ಮಾಡಿ ಎಂದು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯ್ತಿ ಸಿಇಒ ಮೊಹಮ್ಮದ್‌ ರೋಶನ್‌ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.