
ಹಾವೇರಿ: ‘ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಎಲ್ಲ ಮಾಹಿತಿ ತಿಳಿದಿರುತ್ತದೆ. ಪ್ರತಿ ಮನೆ ಮನೆಗೂ ಭೇಟಿ ನೀಡಿ ಜನರ ಆರೋಗ್ಯದ ಬಗ್ಗೆ ವಿಚಾರಿಸುವ ಆಶಾ ಕಾರ್ಯಕರ್ತೆಯರು, ಹೆಣ್ಣು ಮಕ್ಕಳ ಬಗ್ಗೆಯೂ ಕಾಳಜಿ ವಹಿಸಬೇಕು. ಬಾಲ್ಯ ವಿವಾಹ ತಡೆಯಲು ಮುಂದಾಗಬೇಕು. ಜನರಲ್ಲೂ ಅರಿವು ಮೂಡಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ. ಹೇಳಿದರು.
ಜಿಲ್ಲೆಯ ಬ್ಯಾಡಗಿಯಲ್ಲಿ ‘ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ’ ಅಂಗವಾಗಿ ಆಶಾ ಕಾರ್ಯಕರ್ತೆಯರಿಗಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ’ ಕುರಿತ ಒಂದು ದಿನದ ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಮಕ್ಕಳ ಸಂರಕ್ಷಣೆಯಲ್ಲಿ ಎಲ್ಲರ ಪಾತ್ರ ಬಹುಮುಖ್ಯವಾಗಿದೆ. ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹವನ್ನು ಬುಡಸಮೇತ ತೊಲಗಿಸಬೇಕಿದೆ. ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ವೈದ್ಯಾಧಿಕಾರಿ ಡಾ. ಕಾಂತೇಶ ಎಚ್. ಭಜಂತ್ರಿ ಮಾತನಾಡಿ, ‘ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ–1098ಕ್ಕೆ ಕರೆ ಮಾಡಿ ಮಾಹಿತಿ ತಿಳಿಸಬೇಕು’ ಎಂದರು.
‘ಬಾಲ್ಯ ವಿವಾಹದಿಂದ ಮಕ್ಕಳ ಆರೋಗ್ಯದ ಬಗ್ಗೆ ಅಡ್ಡ ಪರಿಣಾಮಗಳು ಉಂಟಾಗುತ್ತದೆ. ಜನಿಸಿದ ಮಗುವು ಅಪೌಷ್ಠಿಕತೆಯಿಂದ ಬಳಲುತ್ತದೆ. ಹಾಗಾಗಿ, ಆಶಾ ಕಾರ್ಯಕರ್ತೆಯರು ಬಾಲ್ಯವಿವಾಹ, ಪೋಕ್ಸೊ, ಮಕ್ಕಳ ಕಾವಲು ಸಮಿತಿಯವರು ಮಕ್ಕಳ ಹಕ್ಕುಗಳ ಕಾಯ್ದೆಗಳ ಕುರಿತು ತಿಳಿದುಕೊಳ್ಳಬೇಕು. ಸಮುದಾಯದಲ್ಲಿರುವ ತಾಯಂದಿರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಿ ಮಕ್ಕಳನ್ನು ಸಮಾಜದ ಉತ್ತಮ ಪ್ರಜೆಯನ್ನಾಗಿ ಬೆಳಸಬೇಕು’ ಎಂದರು.
ಎಸ್.ಎಚ್. ಮಜೀದ ಅವರು ಪೋಕ್ಸೊ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು.
ಬ್ಯಾಡಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚಂದ್ರಶೇಖರ, ತಾಲ್ಲೂಕು ವ್ಯವಸ್ಥಾಪಕ ಸದಾನಂದ ಕೆ.ಸಿ., ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್. ಹುಳ್ಯಾಳ, ತಾಲ್ಲೂಕು ಆರೋಗ್ಯಾಧಿಕಾರಿ ಪ್ರಶಾಂತ ಎಂ. ನವಲೆ ಇದ್ದರು.
‘ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ’
‘ಬಾಲ್ಯ ವಿವಾಹ ಅಪರಾಧವೆಂಬುದು ಗೊತ್ತಿದ್ದರೂ ಕೆಲವರು ಬಾಲ್ಯ ವಿವಾಹ ಮಾಡುತ್ತಿದ್ದಾರೆ. ಇದರಿಂದ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ನಾವೆಲ್ಲರೂ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಬಾಲ್ಯ ವಿವಾಹದ ಬಗ್ಗೆ ಮಾಹಿತಿ ತಿಳಿಸಿದ ಮಕ್ಕಳನ್ನು ರಕ್ಷಿಸಬೇಕು’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ತಾಯಂದಿರು ಹಾಗೂ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯದ ಬಗ್ಗೆ ಗಮನ ಹರಿಸಬೇಕು. ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡುವಂತೆ ತಿಳಿಸಬೇಕು. ಉತ್ತಮ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನಾಗಿ ಮಾಡುವಂತೆ ತಿಳುವಳಿಕೆ ನೀಡಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.