ADVERTISEMENT

ಸಾಹಿತ್ಯ ಸಮ್ಮೇಳನದ ಆತಿಥ್ಯ ವಿಷಯದ ನಿರ್ಧಾರಕ್ಕೆ ಗೊಂದಲ: ಕಸಾಪ ಸಭೆಯಲ್ಲಿ ಗದ್ದಲ

ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗದ್ದಲ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 16:50 IST
Last Updated 7 ಜನವರಿ 2023, 16:50 IST
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ಸದಸ್ಯರು ಸಭೆಯಿಂದ ಹೊರ ನಡೆದರು
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ಸದಸ್ಯರು ಸಭೆಯಿಂದ ಹೊರ ನಡೆದರು   

ಹಾವೇರಿ: ಶನಿವಾರ ರಾತ್ರಿ ಇಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಗದ್ದಲ ಉಂಟಾಗಿದ್ದು, ಯಾವುದೇ ನಿರ್ಧಾರ ಕೈಗೊಳ್ಳಲಾಗದೆ ಸಭೆ ಮುಂದೂಡಲಾಯಿತು.

ಮುಂದಿನ ಸಾಹಿತ್ಯ ಸಮ್ಮೇಳನದ ಸ್ಥಳ ನಿರ್ಧರಿಸಲು ಸಭೆ ಸೇರಲಾಗಿತ್ತು. ಸಭೆಯಲ್ಲಿ ಬಳ್ಳಾರಿ, ಯಾದಗಿರಿ, ಉತ್ತರ ಕನ್ನಡ, ಮಂಡ್ಯ, ಹಾಸನ, ಚಿಕ್ಕಮಗಳೂರು ಸೇರಿದಂತೆ ಒಟ್ಟು ಆರು ಜಿಲ್ಲೆಯವರು ತಮ್ಮ ಜಿಲ್ಲೆಗಳಲ್ಲಿ ಸಮ್ಮೇಳನ ಸಂಘಟಿಸಬೇಕೆಂದು ಹಕ್ಕು ಮಂಡಿಸಿದರು. ಆದರೆ, ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ, ನನಗೆ ಒಂದು ತಿಂಗಳ ಕಾಲಾವಕಾಶ ಕೊಡಿ. ಅನಂತರ ನಿರ್ಧಾರ ಕೈಗೊಳ್ಳೋಣ ಎಂದರು.

ಅದಕ್ಕೆ ಹಾಸನ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡದ ಕಾರ್ಯಕಾರಿ ಸಮಿತಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮೊದಲಿನಿಂದಲೂ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳುತ್ತ ಬರಲಾಗಿದೆ. ನೀವು ಸಂಪ್ರದಾಯ ಮುರಿಯುವುದು ಸರಿಯಲ್ಲ ಎಂದು ಹೇಳಿ ಸಭೆಯಿಂದ ಹೊರ ನಡೆದರು.

ADVERTISEMENT

‘ಕಾರ್ಯಕಾರಿ ಸಮಿತಿ ಸಭೆಯಲ್ಲೇ ಮುಂದಿನ ಸಮ್ಮೇಳನದ ಸ್ಥಳ ನಿಗದಿಪಡಿಸಬೇಕು. ಒಂದು ತಿಂಗಳ ಕಾಲಾವಕಾಶ ಬೇಕಿಲ್ಲ ಎಂದು ಮಹೇಶ ಜೋಶಿಯವರಿಗೆ ಬಲವಾಗಿ ತಿಳಿಸಿ ಸಭೆಯಿಂದ ಹೊರಬಂದಿದ್ದೇವೆ. ಭಾನುವಾರ (ಜ.8) ಬೆಳಿಗ್ಗೆ 8.30ಕ್ಕೆ ಸಭೆ ಸೇರಲು ನಿರ್ಧರಿಸಲಾಗಿದೆ’ ಎಂದು ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದಪ್ಪ ಹೊಟಿ ‘ಪ್ರಜಾವಾಣಿ’ಗೆ ತಿಳಿಸಿದರು.

ಮಹೇಶ ಜೋಶಿ ಪ್ರತಿಕ್ರಿಯಿಸಿ, ನನ್ನ ಅನಾರೋಗ್ಯದ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿದೆ.ಭಾನುವಾರ ನಡೆಯಲಿರುವ ಸಭೆಯಲ್ಲಿ ಮುಂದಿನ ಸಮ್ಮೇಳನ ಎಲ್ಲಿ ಸಂಘಟಿಸಬೇಕೆನ್ನುವುದರ ಬಗ್ಗೆ ತೀರ್ಮಾನಿಸಿ ಘೋಷಿಸಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ಕೆಲ ಕಾರ್ಯಕಾರಿ ಸಮಿತಿ ಸದಸ್ಯರು, ನಿಕಟಪೂರ್ವ ಅಧ್ಯಕ್ಷರು, ಪರಿಷತ್ತಿನ ಪದಾಧಿಕಾರಿಗಳಿಗೆ ಸೂಕ್ತ ವ್ಯವಸ್ಥೆ ಮಾಡದ್ದಕ್ಕೆ ಜೋಶಿಯವರನ್ನು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.