ADVERTISEMENT

‘ಕಿತ್ತೂರು ಕರ್ನಾಟಕ’ಕ್ಕೆ ಹೆಬ್ಬಾಗಿಲು ನಿರ್ಮಾಣ: ಬಿ.ಸಿ.ಪಾಟೀಲ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 15:29 IST
Last Updated 1 ನವೆಂಬರ್ 2021, 15:29 IST
ಬಿ.ಸಿ.ಪಾಟೀಲ, ಕೃಷಿ ಸಚಿವ 
ಬಿ.ಸಿ.ಪಾಟೀಲ, ಕೃಷಿ ಸಚಿವ    

ಹಾವೇರಿ: ‘ಜಿಲ್ಲೆಯ ಗಡಿಭಾಗವಾದ ಕುಮಾರಪಟ್ಟಣ–ಹರಿಹರದ ತುಂಗಭದ್ರಾ ನದಿಯ ಸೇತುವೆ ಬಳಿ ‘ಕಿತ್ತೂರು ಕರ್ನಾಟಕ’ ಹೆಬ್ಬಾಗಿಲು ನಿರ್ಮಿಸಲಾಗುವುದು. ಸಂತರ–ಶರಣರ ಮೂರ್ತಿಗಳು ಹಾಗೂ ಉತ್ತರ ಕರ್ನಾಟಕದ ಸಮಗ್ರ ಸಂಸ್ಕೃತಿ ಬಿಂಬಿಸುವ ಕಲೆಗಳನ್ನು ಪ್ರದರ್ಶಿಸಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವದಲ್ಲಿ ಉತ್ತರ ಕರ್ನಾಟಕ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. ಹೆಬ್ಬಾಗಿಲು ನಿರ್ಮಿಸುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಕೆಯಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ’ ಎಂದರು.

ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನ:‘ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಉಪಚುನಾವಣೆ ನೀತಿಸಂಹಿತೆ ಮುಗಿದ ನಂತರ (ನ.5) ಮುಖ್ಯಮಂತ್ರಿಯವರ ಜತೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

‘ಸರ್ವಜ್ಞ ಪ್ರಾಧಿಕಾರಕ್ಕೆ ಈ ಬಾರಿ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ‘ಕನ್ನಡ ಕಾದಂಬರಿಗಳ ಪಿತಾಮಹ’ ಗಳಗನಾಥರ ಮನೆಯನ್ನು ಅಭಿವೃದ್ಧಿಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆಯಲಾಗುವುದು’ ಎಂದು ಸಚಿವರು ತಿಳಿಸಿದರು.

ಬೆಳಗಾವಿ ಅಧಿವೇಶನ

‘ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 2 ವರ್ಷಗಳಿಂದ ಅಧಿವೇಶನ ನಡೆದಿಲ್ಲ. ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ಅಧಿವೇಶನ ನಡೆಸುವುದು ಸೂಕ್ತ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಚರ್ಚಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.