ADVERTISEMENT

ಹಾವೇರಿ: ಜ.31ರವರೆಗೆ ಕರ್ಫ್ಯೂ ಮುಂದುವರಿಕೆ

ಸಂಕ್ರಾಂತಿ ಹಬ್ಬ: ಮೆರವಣಿಗೆ, ಮನರಂಜನಾ ಕಾರ್ಯಕ್ರಮಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 13:08 IST
Last Updated 12 ಜನವರಿ 2022, 13:08 IST
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ   

ಹಾವೇರಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಜ.31ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಹಾಗೂ ಓಮೈಕ್ರಾನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಹೊರಡಿಸಿರುವ ಆದೇಶದಂತೆ ಜ.31ರ ಬೆಳಿಗ್ಗೆ 5 ಗಂಟೆವರೆಗೆ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕಫ್ರ್ಯೂ ಹಾಗೂ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವಾರಾಂತ್ಯದ ಕಫ್ರ್ಯೂ ಜಾರಿಯಲ್ಲಿರುತ್ತದೆ.

ರಾತ್ರಿ ಹಾಗೂ ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಅತ್ಯವಶ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶವಿದ್ದು, ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

ADVERTISEMENT

ಸಾರ್ವಜನಿಕ ಸಾರಿಗೆಯು ಆಸನದ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬೇಕು. ಜಿಲ್ಲೆಯಾದ್ಯಂತ ಎಲ್ಲಾ ರ್‍ಯಾಲಿ, ಧರಣಿ, ಪ್ರತಿಭಟನೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತೆರೆದ ಸ್ಥಳದಲ್ಲಿ 200 ಹಾಗೂ ಒಳಾಂಗಣದಲ್ಲಿ 100 ಜನರಿಗೆ ಮೀರದಂತೆ ವಿವಾಹ ಕಾರ್ಯಗಳನ್ನು ನಡೆಸಲು ಅನುಮತಿ ನೀಡಲಾಗಿದೆ.

ಸಂಕ್ರಾಂತಿ ಮಾರ್ಗಸೂಚಿ:

ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯದ ಶಾಸ್ತ್ರ ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಲು ಅನುಮತಿ ನೀಡಲಾಗಿದೆ.

ವೈಕುಂಠ ಏಕಾದಶಿ ದಿನದಂದು ಈಗಾಗಲೇ ನಿಗದಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್-19 ಲಸಿಕೆ ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ. ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನರಂಜನಾ ಕಾರ್ಯಕ್ರಮ ಇತ್ಯಾದಿಗಳನ್ನು ಆಯೋಸುವಂತಿಲ್ಲ ಎಂದು ತಿಳಿಸಿದ್ದಾರೆ.

ಕೋವಿಡ್-19 ನಿಯಂತ್ರಣದ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.