ADVERTISEMENT

ಹಾವೇರಿ: 96 ಕುಟುಂಬಗಳಿಗೆ ಕೋವಿಡ್‌ ಪರಿಹಾರ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 14:01 IST
Last Updated 3 ಜನವರಿ 2022, 14:01 IST
ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ₹1 ಲಕ್ಷ ಪರಿಹಾರದ ಚೆಕ್ ಅನ್ನು ಹಾವೇರಿಯಲ್ಲಿ ಸೋಮವಾರ ಕೃಷಿ ಸಚಿವ ಬಿ.ಸಿ.ಪಾಟೀಲ ಮತ್ತು ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ ವಿತರಿಸಿದರು 
ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ₹1 ಲಕ್ಷ ಪರಿಹಾರದ ಚೆಕ್ ಅನ್ನು ಹಾವೇರಿಯಲ್ಲಿ ಸೋಮವಾರ ಕೃಷಿ ಸಚಿವ ಬಿ.ಸಿ.ಪಾಟೀಲ ಮತ್ತು ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ ವಿತರಿಸಿದರು    

ಹಾವೇರಿ: ‘ಕೋವಿಡ್‌ನಿಂದ ಹಾವೇರಿ ಜಿಲ್ಲೆಯವರು ಬೇರೆ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಮೃತಪಟ್ಟಿದ್ದರೆ, ಅಂಥವರ ಕುಟುಂಬದವರಿಗೂ ಪರಿಹಾರ ವಿತರಿಸಲಾಗುವುದು. ಅಗತ್ಯ ದಾಖಲಾತಿಗಳೊಂದಿಗೆ ಪರಿಹಾರ ಪಡೆದುಕೊಳ್ಳಿ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಾವೇರಿ ಹಾಗೂ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕೋವಿಡ್‌ನಿಂದ ಮೃತಪಟ್ಟ 96 ಬಿಪಿಎಲ್ ಕುಟುಂಬದವರಿಗೆ ₹1 ಲಕ್ಷ ಪರಿಹಾರ ಚೆಕ್ ವಿತರಿಸಿ ಅವರು ಮಾತನಾಡಿದರು.

₹1 ಲಕ್ಷದಿಂದ ಜೀವನ ನಿರ್ವಹಣೆ ಸಾಧ್ಯವಾಗುವುದಿಲ್ಲ. ಆದರೂ ಅವರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಹಾಗೂ ಜೀವನಕ್ಕೆ ಆರ್ಥಿಕವಾಗಿ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಸಹಾಯ ಮಾಡಲಾಗುತ್ತಿದೆ. ಧೃತಿಗೆಡದೆ ಜೀವನ ನಡೆಸಿ, ನಮ್ಮ ಸರ್ಕಾರ ಸದಾ ನಿಮ್ಮ ನೆರವಿಗೆ ಇದೆ ಎಂದು ಭರವಸೆ ನೀಡಿದರು.

ADVERTISEMENT

ಶಾಸಕ ನೆಹರು ಓಲೇಕಾರ ಮಾತನಾಡಿ, ‘ಕೋವಿಡ್-19 ಸಂದರ್ಭದಲ್ಲಿ ನಡೆದಂತಹ ಅನಾಹುತಗಳನ್ನು ನಾವು ಇನ್ನೂ ಮರೆತಿಲ್ಲ. ಆತ್ಮೀಯರನ್ನು, ಕುಟುಂಬದವರನ್ನು ಕಳೆದುಕೊಂಡಿದ್ದೇವೆ. ಮತ್ತೆ ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಾಗುತ್ತಿದ್ದು, ಮಕ್ಕಳನ್ನು, ವಯೋವೃದ್ಧರನ್ನು ಮದುವೆ, ಜಾತ್ರೆಗಳಿಗೆ ಕಳುಹಿಸಬಾರದು. ಜ್ವರ, ನೆಗಡಿ ಲಕ್ಷಣ ಕಂಡು ಬಂದರೆ ತಕ್ಷಣವೇ ಹತ್ತಿರದ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು’ ಎಂದು ಮನವಿ ಮಾಡಿದರು.

ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.