ಬ್ಯಾಡಗಿ: ಬೆಳೆವಿಮೆ ಮತ್ತು ಬೆಳೆನಷ್ಟ ಪರಿಹಾರಕ್ಕೆ ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಮಂಗಳವಾರ ಎತ್ತು, ಬಂಡಿಗಳೊಂದಿಗೆ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಿಂದ ಸ್ಟೇಷನ್ ರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಳಿಕ ತಹಶೀಲ್ದಾರ್ ಎಫ್.ಎ.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ‘ಬೆಲೆ ಕುಸಿತದಿಂದ ರೈತರು ಧೃತಿಗೆಟ್ಟಿದ್ದಾರೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ರೈತರನ್ನು ಕಡೆಗಣಿಸಲಾಗುತ್ತಿದೆ. ಹೀಗಾಗಿ ನಮ್ಮ ಬೇಡಿಕೆ ಈಡೇರಿಸುವವರೆಗೂ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದರು.
ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ‘ಕಳೆದ ವರ್ಷ ಭೀಕರ ಬರಗಾಲದ ಪರಿಣಾಮ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಆದರೆ ಪರಿಹಾರ ಮಾತ್ರ ವಿತರಣೆಯಾಗಿಲ್ಲ. ನಿಯಮಾನುಸಾರ ಪ್ರತಿ ಹೆಕ್ಟೇರ್‌ಗೆ ₹34 ಸಾವಿರ ಪರಿಹಾರ ನೀಡಬೇಕು. ಆದರೆ ರಾಜ್ಯ ಸರ್ಕಾರ ಕೇವಲ ₹2,500 ವಿತರಿಸಿ ಕೈತೊಳೆದುಕೊಂಡಿದೆ. ಪ್ರಸಕ್ತ ಅತೀವೃಷ್ಟಿಯಿಂದ ಬೆಳೆಗಳು ಕೊಳೆಯುತ್ತಿವೆ. ಹೀಗಿದ್ದರೂ ತಾಲ್ಲೂಕಿನ 15 ಪಂಚಾಯ್ತಿಗಳಿಗೆ ಬೆಳೆ ವಿಮೆ ಪರಿಹಾರ ಘೋಷಿಸಿಲ್ಲ. ಹೆಚ್ಚು ಇಳುವರಿ ಬಂದಿದೆ ಎಂದು ಸುಳ್ಳು ಲೆಕ್ಕ ತೋರಿಸಿ ವಿಮಾ ಕಂಪನಿಗಳು ರೈತರಿಗೆ ಮೋಸ ಮಾಡಿವೆ’ ಎಂದು ಆರೋಪಿಸಿದರು.
ರೈತ ಸಂಘದ ಕಾರ್ಯಾಧ್ಯಕ್ಷ ಕಿರಣ ಗಡಿಗೋಳ, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.