ADVERTISEMENT

ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ: ಕೆಆರ್‌ಎಸ್‌ ಮುಖಂಡರು ಒತ್ತಾಯ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಆರ್‌ಎಸ್‌ ಮುಖಂಡರಿಂದ ಧರಣಿ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 4:45 IST
Last Updated 21 ಜೂನ್ 2022, 4:45 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷದ ವತಿಯಿಂದ ಸೋಮವಾರ ಹಾವೇರಿ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು 
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಆರ್‌ಎಸ್‌ ಪಕ್ಷದ ವತಿಯಿಂದ ಸೋಮವಾರ ಹಾವೇರಿ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು    

ಹಾವೇರಿ:ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಡಹಗಲೇ ನಡೆಯುತ್ತಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಗಳು ಕಣ್ಮುಚ್ಚಿ ಕುಳಿತಿವೆ. ಕೂಡಲೇ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಅಧಿಕಾರಿಗಳು ಮುಂದಾಗಬೇಕು ಎಂದು ಕೆಆರ್‌ಎಸ್‌ ಮುಖಂಡರು ಒತ್ತಾಯಿಸಿದರು.

ಅಕ್ರಮ ಮರಳುಗಾರಿಕೆ ತಡೆಗಟ್ಟುವುದು, ಇಂದಿರಾ ಕ್ಯಾಂಟಿನ್ ಪುನರಾರಂಭ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸೋಮವಾರ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಪ್ರತಿಭಟನಾ ಜಾಥಾ:ನಗರದ ಮಹರ್ಷಿ ವಾಲ್ಮೀಕಿ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ.ರಸ್ತೆ ಮೂಲಕ ಸಾಗಿ ಮೈಲಾರ ಮಹದೇವಪ್ಪ ವೃತ್ತಕ್ಕೆ ಬಂದು ಸಮಾವೇಶಗೊಂಡಿತು. ನಂತರ ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟಿನ್ ಸ್ಥಾಪಿಸಿದ್ದರೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಬಾಗಿಲು ಮುಚ್ಚಿವೆ. ಕೂಡಲೇ ಇಂದಿರಾ ಕ್ಯಾಂಟಿನ್ ಆರಂಭಿಸಬೇಕು. ಅಲ್ಲದೇ ಇಂದಿರಾ ಕ್ಯಾಂಟಿನ್ ನಡೆಸಿ ಅಕ್ರಮವೆಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬೀಜ, ರಸಗೊಬ್ಬರ ಪೂರೈಸಿ:ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಪೂರೈಕೆಯಾಗಬೇಕು. ಆದರೆ ಜಿಲ್ಲೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದ್ದು, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆಸ್ಪತ್ರೆಗಳಲ್ಲಿ ಅವ್ಯವಸ್ಥೆ:ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಜೊತೆಗೆ ಸ್ವಚ್ಛತೆ, ಶೌಚಾಲಯ, ಕುಡಿಯುವ ನೀರಿನ ಸಮಸ್ಯೆಯಿಂದ ಆಸ್ಪತ್ರೆಗೆ ಬರುವ ರೋಗಿಗಳು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಸಿಬ್ಬಂದಿ ನೇಮಕ ಮಾಡಿ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು. ಸಮಯಕ್ಕೆ ಸರಿಯಾಗಿ ಸರ್ವೆ ಕಾರ್ಯ ಮಾಡದೇ ರೈತರು, ಜನಸಾಮಾನ್ಯರನ್ನು ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಎಲ್ಲ ಇಲಾಖೆಗಳಲ್ಲಿ ಕೆಳಮಟ್ಟದ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದ್ದು, ಮೇಲಾಧಿಕಾರಿಗಳಿಗೆ ದೂರು ಕೊಟ್ಟರು ಯಾರೊಬ್ಬರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಕೆಆರ್‌ಎಸ್‌ ಪಕ್ಷದ ರಾಜ್ಯ ಕಾರ್ಯದರ್ಶಿ ಅರವಿಂದ ಕೆ.ಬಿ., ಉಪಾಧ್ಯಕ್ಷ ಲಿಂಗೇಗೌಡ ಎಸ್.ಎಚ್., ಜಿಲ್ಲಾ ಘಟಕದ ಅಧ್ಯಕ್ಷ ಉಜಣೆಪ್ಪ ಕೋಡಿಹಳ್ಳಿ, ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್, ಗಂಗಾ ಕೋರಿ, ಚರಣ ರೊಡ್ಡನವರ ಇದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಭೇಟಿ:ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕಾಮಿಸಬೇಕು ಎಂದು ಕೆಆರ್‌ಎಸ್‌ ಪಕ್ಷದ ಮುಖಂಡರು ಪಟ್ಟು ಹಿಡಿದರು. ಸಂಜೆ ವೇಳೆಗೆ ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಸಮಸ್ಯೆಗಳನ್ನು ಆಲಿಸಿದರು. ಕೆಲ ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸುತ್ತೇವೆ. ಕೆಲ ಸಮಸ್ಯೆಗಳನ್ನು ನಮ್ಮ ಹಂತದಲ್ಲೇ ಬಗೆಹರಿಸುತ್ತೇವೆ. ನಿಮ್ಮ ಬೇಡಿಕೆಗಳ ಕುರಿತು ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಪ್ರತಿಭಟನೆ ಮೊಟಕುಗೊಳಿಸಿ ಎಂದು ಮನವೊಲಿಸಿದರು.

ಆದರೆ, ಪ್ರತಿಭಟನಾಕಾರರು ನಮ್ಮ ಸಮಸ್ಯೆಗಳು ಬಗೆಹರಿಯದವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದು ರಾತ್ರಿವರೆಗೂ ಪ್ರತಿಭಟನೆ ಮುಂದುವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.