ADVERTISEMENT

ಹಾವೇರಿ | ‘ಪರಿಶಿಷ್ಟರ ಮೇಲೆ ದೌರ್ಜನ್ಯ; 55 ಪ್ರಕರಣ’

ಜಿಲ್ಲಾ ಜಾಗೃತಿ ಸಮಿತಿ ಸಭೆ; ದೌರ್ಜನ್ಯ ತಡೆ ಕಾಯ್ದೆ ಜಾಗೃತಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 2:28 IST
Last Updated 23 ಸೆಪ್ಟೆಂಬರ್ 2025, 2:28 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ’ಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿದರು
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ’ಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿದರು   

ಹಾವೇರಿ: ‘ಪರಿಶಿಷ್ಟ ಜಾತಿ (ಎಸ್‌.ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌.ಟಿ) ಸಮುದಾಯದವರ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ಜಿಲ್ಲೆಯಾದ್ಯಂತ ಪ್ರಸಕ್ತ ವರ್ಷದಲ್ಲಿ 55 ಪ್ರಕರಣಗಳು ದಾಖಲಾಗಿವೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ತಿಳಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ’ಯಲ್ಲಿ ಅವರು ಪ್ರಕರಣಗಳ ಮಾಹಿತಿ ನೀಡಿದರು.

‘ಪರಿಶಿಷ್ಟ ಸಮುದಾಯದವರ ಮೇಲೆ ನಡೆಯುವ ದೌರ್ಜನ್ಯಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. 2025ರ ಜನವರಿಯಿಂದ ಸೆಪ್ಟೆಂಬರ್ 20ರವರೆಗೆ ದಾಖಲಾಗಿರುವ 55 ಪ್ರಕರಣಗಳ ಪೈಕಿ, 53 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗಿದೆ’ ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಶಿಕ್ಷೆ ಕುರಿತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮ ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ತಾಲ್ಲೂಕುವಾರು ಹಾಗೂ ಪೊಲೀಸ್ ಠಾಣಾವಾರು ದೌರ್ಜನ್ಯ ಪ್ರಕರಣಗಳ ಮಾಹಿತಿ ಸಂಗ್ರಹಿಸಬೇಕು. ಅಂತಹ ಪ್ರದೇಶಗಳಲ್ಲಿ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ದೌರ್ಜನ್ಯ ಪ್ರಕರಣದ ನಿಖರ ಮಾಹಿತಿ ತಿಳಿದುಕೊಳ್ಳಬೇಕು. ಅಪರಾಧಿಗೆ ಶಿಕ್ಷೆಯಾಗಬೇಕು. ನಿರಪರಾಧಿಗೆ ಶಿಕ್ಷೆಯಾಗಬಾರದು. ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ ಪಾವತಿಸಬೇಕು. ತಾಂಡಾಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅರಿವು ಕಾರ್ಯಕ್ರಮ ಆಯೋಜಿಸಬೇಕು’ ಎಂದು ಹೇಳಿದರು.

ಪರಿಶಿಷ್ಟ ಸಮುದಾಯದವರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತೆರೆದಿದ್ದ ಸಮಿತಿಯ ಸದಸ್ಯರು, ‘ಭರಡಿ ಗ್ರಾಮದಲ್ಲಿ ಸ್ಮಶಾನ ಜಾಗದ ಸಮಸ್ಯೆಯಿದೆ. ಮರಡೂರ ಗ್ರಾಮದಲ್ಲಿ ಸ್ಮಶಾನಕ್ಕೆ ದಾರಿಯಿಲ್ಲ. ಸವಣೂರ ಗ್ರಾಮದಲ್ಲಿ 2015ರಲ್ಲಿ ಎಸ್‌.ಸಿ.ಯ 20 ಕುಟುಂಬಗಳಿಗೆ ಪಟ್ಟಾ ನೀಡಲಾಗಿದೆ, ಆದರೆ, ಆರ್‌ಟಿಸಿ ಮಾಡಿಲ್ಲ. ಹರವಿ ಗ್ರಾಮದಲ್ಲಿ ನೀರು ಸಂಗ್ರಹ ಟ್ಯಾಂಕ್ ಶಿಥಿಲಗೊಂಡಿದ್ದು, ಇದರಿಂದ ಅಕ್ಕ–ಪಕ್ಕದ ಪರಿಶಿಷ್ಟರ ಮನೆಗಳಿಗೆ ಜೌಗು ಹಿಡಿದಿದೆ. ಹಿರೇಮಳ್ಳಿಹಳ್ಳಿ ಎಸ್.ಸಿ. ಕಾಲೊನಿಗೆ ಹೊಸ ಅಂಗನವಾಡಿ ಅಗತ್ಯವಿದೆ’ ಎಂದು ದೂರಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ‘ಸದಸ್ಯರ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಆದ್ಯತೆ ಮೇರಗೆ ಬಗೆಹರಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾ ಎಸ್‌ಪಿ ಲಕ್ಷ್ಮಣ ಶಿರಕೋಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಜಿಲ್ಲಾ ಪಬ್ಲಿಕ್‌ ಪ್ರಾಸಿಕ್ಯೂಟರ್ ಸರೋಜಾ ಕೂಡಲಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.