ADVERTISEMENT

ಶಾಂತಿಯುತ ಬಕ್ರೀದ್ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 14:13 IST
Last Updated 17 ಜುಲೈ 2021, 14:13 IST
ಹಾವೇರಿ ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶನಿವಾರ ಬಕ್ರೀದ್‌ ಅಂಗವಾಗಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು  –ಪ್ರಜಾವಾಣಿ ಚಿತ್ರ
ಹಾವೇರಿ ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶನಿವಾರ ಬಕ್ರೀದ್‌ ಅಂಗವಾಗಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು  –ಪ್ರಜಾವಾಣಿ ಚಿತ್ರ   

ಹಾವೇರಿ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮನವಿ ಮಾಡಿಕೊಂಡರು.

ನಗರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ವಿವಿಧ ಮುಖಂಡರ ಸಮ್ಮುಖದಲ್ಲಿ ನಡೆದ ಶಾಂತಿ ಸಭೆಯಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿ ಅನುಸಾರ ಶಾಂತಿಯುತವಾಗಿ ಬಕ್ರೀದ್ ಆಚರಣೆಗೆ ಸಹಮತ ವ್ಯಕ್ತವಾಯಿತು.

ಪ್ರಸಕ್ತ ಪರಿಸ್ಥಿತಿಯನ್ನು ವಿವರಿಸಿದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮೊದಲ ಹಾಗೂ ಎರಡನೇ ಅಲೆಯಲ್ಲಿ ತಾವೆಲ್ಲ ಸಹಕಾರ ನೀಡಿದ್ದರಿಂದ ಯಶಸ್ವಿಯಾಗಿ ಕೋವಿಡ್ ನಿಯಂತ್ರಣ ಸಾಧಿಸಲು ಸಾಧ್ಯವಾಗಿದೆ. ಮೂರನೇ ಅಲೆ ಆರಂಭವಾಗುವ ಮುನ್ಸೂಚನೆ ಇರುವುದರಿಂದ ಯಾವುದೇ ಅಪಾಯವನ್ನು ಆಹ್ವಾನಿಸಿಕೊಳ್ಳದೇ ಎಲ್ಲರೂ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಿ ಹಬ್ಬ ಆಚರಣೆಗಳನ್ನು ನಡೆಸಬೇಕಾಗಿದೆ ತಿಳಿಸಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಜುಲೈ 21ರಂದು ಬಕ್ರೀದ್ ಹಬ್ಬದ ದಿನ ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಿರ್ಬಂಧಿಸಲಾಗಿದೆ. ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಲು ಇಚ್ಛಿಸಿದ್ದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಆಯಾ ಮಸೀದಿಗಳ ಸ್ಥಳವಕಾಶದ ಶೇ 50 ಜನರು ಮೀರದಂತೆ ಮಾರ್ಗಸೂಚಿಗಳನ್ನು ಅನುಸರಿಸಿ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು ಎಂದು ತಿಳಿಸಿದರು.

ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 65 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು. ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ಉಷ್ಣಾಂಶ ತಪಾಸಣಿ ಮಾಡಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡದಿರಲು ನಿರ್ದೇಶನವಿದೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಡಿವೈಎಸ್ಪಿ ಶಂಕರ ಮಾರಿಹಾಳ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಮುಸ್ಲಿಂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.