ADVERTISEMENT

ಕೊರೊನಾ ಸೋಂಕಿತರ ಸಾವುಗಳ ಪರಿಶೋಧನೆ: ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 15:23 IST
Last Updated 7 ಜೂನ್ 2021, 15:23 IST
ಹಾವೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದ ಭವನದ ಕಾಮಗಾರಿಯನ್ನು ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಮತ್ತು ಸಚಿವ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು
ಹಾವೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದ ಭವನದ ಕಾಮಗಾರಿಯನ್ನು ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಮತ್ತು ಸಚಿವ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು   

ಹಾವೇರಿ: ‘ಜಿಲ್ಲೆಯಲ್ಲಿ ಕೋವಿಡ್‌ ಸಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿರುವ ಕುರಿತು ತಪಾಸಣೆ ನಡೆಸಿ ವರದಿ ನೀಡಲು ವೈದ್ಯರು ಮತ್ತು ಪರಿಣತರ ವಿಶೇಷ ತಂಡ ಈ ವಾರದಲ್ಲಿ ಹಾವೇರಿಗೆ ಬರಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷ ತಂಡ ಕಳುಹಿಸಿ ಕೊಡುವ ಸಂಬಂಧ ಈಗಾಗಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಪತ್ರ ಬರೆದಿದ್ದೇನೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ 5ಕ್ಕಿಂತ ಕಡಿಮೆಯಾಗಿದೆ. ಆರ್‌ಟಿಪಿಸಿಆರ್‌ ಪರೀಕ್ಷೆ ಸಂಖ್ಯೆ ಹೆಚ್ಚು ಮಾಡಿದ್ದೇವೆ. ಆದರೆ, ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚು ಇದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಕೋವಿಡ್‌ ಸಾವುಗಳು ಏಕೆ ಆಗುತ್ತಿವೆ? ಇದಕ್ಕೆ ಕಾರಣವೇನು? ಎಂಬ ಬಗ್ಗೆ ಪರಿಶೀಲನೆಮಾಡಬೇಕಿದೆ ಎಂದರು.

ADVERTISEMENT

‘ಮುಂದಿನ ದಿನಗಳಲ್ಲಿ ಕೋವಿಡ್‌ ಸಾವುಗಳು ಸಂಭವಿಸದಂತೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಕುರಿತು ಪರಿಶೀಲಿಸಿ ವರದಿ ನೀಡಬೇಕು.ವರದಿಯ ಶಿಫಾರಸುಗಳನ್ನು ಆಧಾರವಾಗಿಟ್ಟುಕೊಂಡು ಮುಂದಿನ ಕ್ರಮ ಜರುಗಿಸುತ್ತೇವೆ’ ಎಂದು ತಿಳಿಸಿದರು.

ಕಾಮಗಾರಿ ಪರಿಶೀಲನೆ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದ ಭವನದ ಕಾಮಗಾರಿಯನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರೊಂದಿಗೆ ಸಚಿವ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರು ಕಾಮಗಾರಿಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ಜಿಲ್ಲಾ ಕಾರ್ಯಾಲಯದ ಕಾಮಗಾರಿ ಹಾಗೂ ಕೋವಿಡ್‌ ಆರೈಕೆ ಕೇಂದ್ರಗಳ ವೀಕ್ಷಣೆ ಮಾಡಲು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದೇನೆ ಎಂದು ನಳಿನ್‌ಕುಮಾರ್ ಕಟೀಲ್‌ ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಸಂಸದ ಶಿವಕುಮಾರ ಉದಾಸಿ, ಶಾಸಕ ನೆಹರು ಓಲೇಕಾರ್‌, ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.