ADVERTISEMENT

ಸರ್ಕಾರಿ ಯೋಜನೆ ರೈತರಿಗೆ ತಲುಪಿಸಿ: ಬಿ.ವಸಂತಕುಮಾರ

ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಜಿ.ಪಂ ಮುಖ್ಯ ಆಡಳಿತಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಮೇ 2025, 13:31 IST
Last Updated 3 ಮೇ 2025, 13:31 IST
ರಟ್ಟೀಹಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಬಿ.ವಸಂತಕುಮಾರ ಮಾತನಾಡಿದರು
ರಟ್ಟೀಹಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಬಿ.ವಸಂತಕುಮಾರ ಮಾತನಾಡಿದರು   

ರಟ್ಟೀಹಳ್ಳಿ: ‘ರೈತರು ತಮ್ಮ ಹೊಲಗಳಲ್ಲಿ ಕೃಷಿ ಹೊಂಡ, ಬದು ನಿರ್ಮಾಣ ಸೇರಿದಂತೆ ಇನ್ನೂ ಹಲವಾರು ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಇಲಾಖೆಯವರು ರೈತರಿಗೆ ಹೆಚ್ಚಿನ ಅರಿವು, ಜಾಗೃತಿ ಮೂಡಿಸುವ ಕೆಲಸ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಆಡಳಿತಾಧಿಕಾರಿ ಬಿ.ವಸಂತಕುಮಾರ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಸರ್ಕಾರಿ, ಅನುದಾನಿತ ಶಾಲೆಗಳು ಕಡಿಮೆ ಫಲಿತಾಂಶ ದಾಖಲಿಸಿವೆ. ಮುಂದಿನ ವರ್ಷ ಫಲಿತಾಂಶ ಹೆಚ್ಚಳಕ್ಕೆ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಕ್ರಮ ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ಶಾಲಾ ಕಟ್ಟಡಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಸರ್ಕಾರಿ ಕಟ್ಟಡಗಳ ದುರಸ್ತಿ, ನಿರ್ಮಾಣ ಕಾಮಗಾರಿಗಳನ್ನು ಶಾಸಕರ ಗಮನಕ್ಕೆ ತಂದು ಅನುಮೋದನೆ ಪಡೆದು ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿಕಾಂತ ಬೊಮ್ಮಣ್ಣನವರ ಮಾತನಾಡಿ, ‘ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಬೇಸಿಗೆ ರಜೆ ಇರುವ ಕಾರಣ ಈಗಾಗಲೇ ಪೂರೈಕೆಯಾಗಿರುವ ಆಹಾರ ಧಾನ್ಯಗಳು ಹಾಳಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಸೂಚಿಸಿದರು.

ತಾಲ್ಲೂಕಿನ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಇಲಾಖಾವಾರು ಪ್ರಗತಿ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ದಿನೇಶ ಟಿ., ದೇವರಾಜ ಸಣ್ಣಕಾರಗಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.