ADVERTISEMENT

ಬಿತ್ತನೆ ಬೀಜ ವಿತರಣೆಗೆ ಚಾಲನೆ|ರಿಯಾಯಿತಿ ದರ: ಸದುಪಯೋಗ ಆಗಲಿ

​ಪ್ರಜಾವಾಣಿ ವಾರ್ತೆ
Published 21 ಮೇ 2025, 13:17 IST
Last Updated 21 ಮೇ 2025, 13:17 IST
ರಟ್ಟೀಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆಗೆ ಬುಧವಾರ ಚಾಲನೆ ನೀಡಲಾಯಿತು
ರಟ್ಟೀಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆಗೆ ಬುಧವಾರ ಚಾಲನೆ ನೀಡಲಾಯಿತು   

ರಟ್ಟೀಹಳ್ಳಿ: ‘ರೈತರಿಗೆ ಅವಶ್ಯವಿರುವ ಮೆಕ್ಕೆಜೋಳ, ಸೋಯಬೀನ್ಸ್‌, ಶೇಂಗಾ, ಹೆಸರು, ತೊಗರಿ, ಅಲಸಂದೆ ಮೊದಲಾದ ಬಿತ್ತನೆ ಬೀಜಗಳ ದಾಸ್ತಾನು ಮಾಡಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ವಿತರಣೆ ಮಾಡಲಾಗುತ್ತದೆ’ ಎಂದು ಕೃಷಿಕ ಸಮಾಜದ ಅಧ್ಯಕ್ಷ ರೇವಣೆಪ್ಪ ತಂಬಾಕದ ಹೇಳಿದರು.

ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

‘ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಕೃಷಿ ಇಲಾಖೆಯಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳು ದೊರೆಯುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು. ‌

ADVERTISEMENT

ಕೃಷಿ ಉಪ ನಿರ್ದೇಶಕ ಕರಿಯಲ್ಲಪ್ಪ ಕೊರಚರ ಮಾತನಾಡಿ, ‘ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರವನ್ನು ರೈತರು ರೂಢಿಗತವಾಗಿ ಬಳಸುತ್ತಿದ್ದಾರೆ. ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಹಾಗಾಗಿ, ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಬೇಕು’ ಎಂದು ಸಲಹೆ ನೀಡಿದರು.

ಕೃಷಿ ಅಧಿಕಾರಿ ಜಿ.ಎಂ. ಬತ್ತಿಕೊಪ್ಪ, ಆತ್ಮಾ ಸಿಬ್ಬಂದಿ ಮಂಗಳಾ ಹುಲ್ಲತ್ತಿ, ಕೃಷಿ ಇಲಾಖೆಯ ಸಿಬ್ಬಂದಿ, ಕೃಷಿಕ ಸಮಾಜದ ಸದಸ್ಯರು ಇದ್ದರು.

‘ಉಪಕೇಂದ್ರಗಳಲ್ಲೂ ವಿತರಣೆ’

‘ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಆದ್ಯತೆ ಮೇರೆಗೆ ಬಿತ್ತನೆ ಬೀಜ ಖರೀದಿಸುವುದು ಉತ್ತಮ. ಬಿತ್ತನೆ ಬೀಜ ಖರೀದಿಸಿ ರಸೀದಿಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ರಸೀದಿಯಲ್ಲಿ ಲಾಟ್ ಸಂಖ್ಯೆ ಹಾಗೂ ಮಾರಾಟ ದರದ ವಿವರ ನಮೂದಿಸಿರುವುದನ್ನು ಖಾತರಿಪಡಿಸಿಕೊಳ್ಳಬೇಕು’ ಸಹಾಯಕ ಕೃಷಿ ನಿರ್ದೇಶಕ ಎಚ್.ಬಿ. ಗೌಡಪ್ಪಳವರ ಹೇಳಿದರು. ‘ಕೃಷಿ ಪರಿಕರ ಮಾರಾಟಗಾರರು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಬಿತ್ತನೆ ಬೀಜಗಳನ್ನು ಮಾರಾಟ ಮಾಡಬಾರದು. ರಟ್ಟೀಹಳ್ಳಿ ತಾಲ್ಲೂಕು ಕೇಂದ್ರದೊಂದಿಗೆ ತಡಕನಹಳ್ಳಿ ಹಳ್ಳೂರದ ಉಪಕೇಂದ್ರಗಳಲ್ಲೂ ಬಿತ್ತನೆ ಬೀಜ ವಿತರಣೆ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.