ADVERTISEMENT

ಹಾವೇರಿ | ದೀಪಾವಳಿಯಲ್ಲಿ 2 ಗಂಟೆ ಮಾತ್ರ ಪಟಾಕಿಗೆ ಅವಕಾಶ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 2:56 IST
Last Updated 17 ಅಕ್ಟೋಬರ್ 2025, 2:56 IST
ವಿಜಯ ಮಹಾಂತೇಶ ದಾನಮ್ಮನವರ  
ವಿಜಯ ಮಹಾಂತೇಶ ದಾನಮ್ಮನವರ     

ಹಾವೇರಿ: ‘ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಸುಪ್ರೀಂಕೋರ್ಟ್ ಆದೇಶದಂತೆ, ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಹಾರಿಸಲು ಅವಕಾಶವಿದೆ. ಹಸಿರು ಪಟಾಕಿ ಹೊರತುಪಡಿಸಿ ಇತರೆ ಎಲ್ಲ ಪಟಾಕಿಗಳನ್ನು ನಿಷೇಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಹೇಳಿದ್ದಾರೆ.

ಹಬ್ಬದ ಆಚರಣೆ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ದೀಪಾವಳಿ ಹಬ್ಬವನ್ನು ಆರೋಗ್ಯಯುತವಾಗಿ ಆಚರಿಸಬೇಕು’ ಎಂದಿದ್ದಾರೆ.

‘ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡುತ್ತಿವೆ. ಇದರಿಂದ ಪರಿಸರ ಹಾಗೂ ಜನರ ಆರೋಗ್ಯ ಹಾಳಾಗುತ್ತಿದೆ. ಪ್ರಾಣಿ- ಪಕ್ಷಿಗಳಿಗೂ ಅಪಾಯ ತರುತ್ತಿದೆ. ಹೀಗಾಗಿ, ದೀಪಾವಳಿ ಹಬ್ಬವನ್ನು ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು’ ಎಂದು ಅವರು ಕೋರಿದ್ದಾರೆ.

ADVERTISEMENT

‘ಹಸಿರು ಪಟಾಕಿ ಬಾಕ್ಸ್‌ಗಳ ಮೇಲೆ, ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಮತ್ತು ನ್ಯಾಷನಲ್ ಎನ್ವಿರಾಮೆಂಟಲ್ ಎಂಜಿನಿಯರಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅವರ ಲಾಂಛನ ಇರುವುದನ್ನು ಗಮನಿಸಿ ಖರೀದಿಸಬೇಕು. ಅಧಿಕೃತ ಮಾರಾಟಗಾರರು, ಸಂಬಂಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರದಿಂದ ನೀಡುವ ಪರವಾನಗಿ ಪಡೆದು ಅಂಗಡಿ ತೆರೆಯಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದರೆ, ಅಂಥ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದ್ದಾರೆ.

ಕೆಲ ಪ್ರದೇಶಗಳಲ್ಲಿ ಪಟಾಕಿ ನಿಷೇಧ

‘ಶಿಕ್ಷಣ ಸಂಸ್ಥೆ, ಆಸ್ಪತ್ರೆ, ವೃದ್ಧಾಶ್ರಮ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. 125 ಡೆಸಿಬಲ್‌ಗೂ ಮೇಲ್ಪಟ್ಟ ಪಟಾಕಿಗಳ ಹಾರಿಸುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಟಾಕಿ ಸಿಡಿತದ ನಂತರದ ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.