ADVERTISEMENT

ಹಾವೇರಿ | ನಕಲಿ ಪಹಣಿ ಜಾಲ: ತನಿಖೆಗೆ ಸಚಿವ ಶಿವಾನಂದ ಪಾಟೀಲ ಸೂಚನೆ

ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ | ಬೆಳೆ ಪರಿಹಾರ ಕೊಡಿಸಲು ಏಜೆಂಟರು; ಶಾಸಕ ಆರೋಪ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 2:59 IST
Last Updated 10 ಸೆಪ್ಟೆಂಬರ್ 2025, 2:59 IST
ಹಾವೇರಿ ಜಿಲ್ಲೆಯ ಅಭಿವೃದ್ಧಿಗಾಗಿ ಎರಡು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮಾಹಿತಿಯುಳ್ಳ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಮಂಗಳವಾರ ಬಿಡುಗಡೆ ಮಾಡಿದರು.
ಹಾವೇರಿ ಜಿಲ್ಲೆಯ ಅಭಿವೃದ್ಧಿಗಾಗಿ ಎರಡು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮಾಹಿತಿಯುಳ್ಳ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಮಂಗಳವಾರ ಬಿಡುಗಡೆ ಮಾಡಿದರು.   

ಹಾವೇರಿ: ‘ನಕಲಿ ಪಹಣಿ ಪತ್ರ (ಆರ್‌.ಟಿ.ಸಿ) ತಯಾರಿಸಿ ರೈತರಲ್ಲದವರಿಗೆ ಬೆಳೆಹಾನಿ ಪರಿಹಾರ ಕೊಡಿಸುವ ಜಾಲ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಆರೋಪವಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಎರಡು ತಿಂಗಳೊಳಗೆ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನಕಲಿ ಪಹಣಿ ಪತ್ರ ಸೃಷ್ಠಿಸಲು ಏಜೆಂಟರು ಸೃಷ್ಟಿಯಾಗಿದ್ದಾರೆ. ಅವರು ಯಾರು ? ಅವರ ಹಿಂದಿರುವವರ ಯಾರು ? ಎಂಬುದನ್ನು ಪತ್ತೆ ಮಾಡಬೇಕು. ಇಂಥ ಪ್ರಕರಣಗಳು ನಡೆಯದಂತೆ ಜಾಗೃತಿ ವಹಿಸಬೇಕು’ ಎಂದು ಸೂಚಿಸಿದರು.

ವಿಷಯ ಪ್ರಸ್ತಾಪಿಸಿದ್ದ ಶಿಗ್ಗಾವಿ ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ, ‘ಶಿಗ್ಗಾವಿ ತಾಲೂಕಿನಲ್ಲಿ ನಕಲಿ ಆರ್‌ಟಿಸಿ ತಯಾರಿಸಿ ರೈತರಲ್ಲದವರಿಗ ಬೆಳೆಹಾನಿ ಪರಿಹಾರ ಕೊಡಿಸಲಾಗಿದೆ. ಇದರಿಂದ ನೈಜ ರೈತರಿಗೆ ಅನ್ಯಾಯವಾಗಿದೆ. ಈ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಈ ದೊಡ್ಡ ಜಾಲದಲ್ಲಿ ಅಧಿಕಾರಿಗಳ ಹಸ್ತಕ್ಷೇಪ ಇರುವ ಬಗ್ಗೆ ಅನುಮಾನವಿದೆ’ ಎಂದು ದೂರಿದರು.

ADVERTISEMENT

‘ಯಾವ ಬೆಳೆಗೆ ವಿಮೆ ಬರುತ್ತದೆ ಎಂಬುದು ಜಾಲದ ಏಜೆಂಟರಿಗೆ ಮೊದಲೇ ಗೊತ್ತಾಗುತ್ತಿದೆ. ಕಮಿಷನ್ ಲೆಕ್ಕದಲ್ಲಿ ಹಣ ಪಡೆದುಕೊಂಡು ದಂಧೆ ನಡೆಸುತ್ತಿದ್ದಾರೆ. ನೈಜ ರೈತರು ಬೆಳೆ ವಿಮೆ ಪಾವತಿಸಿದರೂ ಪರಿಹಾರ ಬರುತ್ತಿಲ್ಲ. ಏಜೆಂಟರು ವಿಮೆ ಪಾವತಿಸಿದರೆ ಪರಿಹಾರ ಬರುತ್ತಿದೆ. ಇದು ಯಾವ ಲೆಕ್ಕಾಚಾರ. ಜಿಲ್ಲಾಧಿಕಾರಿಗೂ ಈ ಬಗ್ಗೆ ತಿಳಿಸಲಾಗಿದ್ದು, ಸೂಕ್ತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

ಕಳಪೆ ಬೀಜ, ಪುನಃ ತೆರೆದ ಮಳಿಗೆಗಳು: ‘ಕಳಪೆ ಬೀಜ–ಗೊಬ್ಬರ ಮಾರಾಟದಿಂದ ರಾಣೆಬೆನ್ನೂರಿಗೆ ಕೆಟ್ಟ ಹೆಸರು ಬಂದಿದೆ. ಕಳಪೆ ಬೀಜ-ಗೊಬ್ಬರ ಮಾರಾಟ ಮಾಡಿದ್ದ ಮಳಿಗೆಗಳನ್ನು ಪುನಃ ತೆರೆಯಲಾಗಿದೆ. ಇದಕ್ಕೆ ಅನುಮತಿ ನೀಡಿದವರು ಯಾರು’ ಎಂದು ಶಾಸಕ ಪ್ರಕಾಶ ಕೋಳಿವಾಡ ಪ್ರಶ್ನಿಸಿದರು.

ಸಚಿವ ಶಿವಾನಂದ ಪಾಟೀಲ, ‘ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದ ಬೀಜ–ಗೊಬ್ಬರದ ಪ್ರಯೋಗಾಲಯದ ವರದಿ ಏನಾಯಿತು’ ಎಂದು ಜಿಲ್ಲಾ ಎಸ್‌ಪಿ ಅವರನ್ನು ಪ್ರಶ್ನಿಸಿದರು.

‘ಕಳಪೆ ಎಂಬುದಾಗಿ ವರದಿ ಬಂದಿದೆ’ ಎಂದು ಎಸ್‌ಪಿ ತಿಳಿಸಿದರು. ಸಚಿವ, ‘ಕಳಪೆ ಬೀಜ–ಗೊಬ್ಬರ ಮಾರಾಟಗಾರರ ಮಳಿಗೆಗಳನ್ನು ಕೂಡಲೇ ಮುಚ್ಚಿಸಿ’ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಪತ್ತೆಯಾದ ಕಳಪೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟಗಾರರ ಪರವಾನಗಿ ರದ್ದು ಮಾಡಿ, ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.

ಅಧಿಕಾರಿಗಳ ಅಮಾನತಿಗೆ ಸೂಚನೆ: ತುಂಗಾ ಮೇಲ್ದಂಡೆ ಯೋಜನೆ, ಶಿಗ್ಗಾವಿ ಏತ ನೀರಾವರಿ, ವಿವಿಧ ಕೆರೆ ತುಂಬಿಸುವ ಯೋಜನೆ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಮಾಹಿತಿ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ, ಕಾಮಗಾರಿ ಆರಂಭದ ದಿನಾಂಕ, ಮುಕ್ತಾಯದ ದಿನಾಂಕ, ನಿರ್ವಹಣೆ ದಿನಾಂಕ, ಆರ್ಥಿಕ ಹಾಗೂ ಭೌತಿಕ ಪ್ರಗತಿ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಸರಿಯಾದ ಮಾಹಿತಿ ನೀಡದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ. ಅದಕ್ಕೂ ಉತ್ತರಿಸದಿದ್ದರೆ, ಅಮಾನತು ಮಾಡಿ’ ಎಂದು ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಅವರಿಗೆ ಸೂಚನೆ ನೀಡಿದರು.

ಗುತ್ತಿಗೆದಾರರಿಗೆ ನೋಟಿಸ್: ‘ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳು ವಿಳಂಬವಾಗುತ್ತಿದೆ. ಇದರಿಂದ ಜನರಿಗೆ ತೊಂದರೆ ಉಂಟಾಗುತ್ತಿದೆ. ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟಿಸ್ ನೀಡಿ’ ಎಂದು ಸಚಿವ ಪಾಟೀಲ ಸೂಚನೆ ನೀಡಿದರು.

‘ಹಾವೇರಿ–ಹಾನಗಲ್–ಶಿರಸಿ, ಗದಗ-ಹೊನ್ನಾಳಿ ರಸ್ತೆ ಸೇರಿದಂತೆ ಲೋಕೋಪಯೋಗಿ ಇಲಾಖೆ, ಕೆಶಿಪ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆ ಕಾಮಗಾರಿಗಳು ವಿಳಂಬವಾಗಿದೆ. ನಿರ್ವಹಣೆಯಲ್ಲೂ ಲೋಪವಾಗುತ್ತಿದೆ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಶಾಸಕರಾದ ರುದ್ರಪ್ಪ ಲಮಾಣಿ, ಯು.ಬಿ. ಬಣಕಾರ, ಶ್ರೀನಿವಾಸ ಮಾನೆ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ ರುಚಿ ಬಿಂದಲ್, ಜಿಲ್ಲಾ ಎಸ್‌ಪಿ ಯಶೋಧಾ ವಂಟಗೋಡಿ ಇದ್ದರು.

‘ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಲಿಗೆ ಪ‍್ರಸ್ತಾವ’

‘ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಉದ್ದೇಶದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ಮಾರ್ಗಸೂಚಿಗಳಲ್ಲಿ ಬದಲಾವಣೆ ತರುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು. ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರೈತರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು ‘ಬೆಳೆಹಾನಿ ಪರಿಹಾರ ವಿತರಣೆಗೆ ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿ ಖಾತೆಯಲ್ಲಿ ₹ 38 ಕೋಟಿ ಇದೆ. ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ ‘ಬೆಳೆ ಹಾನಿ ಪರಿಹಾರವನ್ನು ತಕ್ಷಣವೇ ವಿತರಣೆ ಮಾಡಬೇಕು. ವರದಾ–ಬೇಡ್ತಿ ನದಿ ಜೋಡಣೆ ಮಾಡಬೇಕು. ರೈತರಿಗೆ ₹3 ಲಕ್ಷದಿಂದ ₹ 5 ಲಕ್ಷದವರೆಗೆ ಕೃಷಿ ಸಾಲ ನೀಡಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಪಡೆಯುವ ವ್ಯವಸ್ಥೆ ಕೈ ಬಿಡಬೇಕು. ಡಿ.ಸಿ.ಸಿ ಬ್ಯಾಂಕ್‌ ವಿಭಜನೆ ಮಾಡಬೇಕು. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಲಾವಣೆ ಮಾಡಬೇಕು’ ಎಂದು ಒತ್ತಾಯಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.