ADVERTISEMENT

ಪ್ರಧಾನಮಂತ್ರಿ ಮತ್ಸ್ಯ ಸಂಪದ: ಮೀನು ಮಾರುಕಟ್ಟೆಗೆ ಪ್ರಸ್ತಾವ ಸಲ್ಲಿಸಲು ಸೂಚನೆ

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 13:21 IST
Last Updated 18 ಸೆಪ್ಟೆಂಬರ್ 2020, 13:21 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ’ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು 
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ’ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು    

ಹಾವೇರಿ: ಮೀನು ಕೃಷಿ ವಿಸ್ತರಣೆ, ಮೀನು ಮಾರುಕಟ್ಟೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (ಪಿ.ಎಂ.ಎಂ.ಎಸ್.ವೈ) ಜಿಲ್ಲೆಯ ನಗರ ಹಾಗೂ ಪಟ್ಟಣಗಳಲ್ಲಿ ನೂತನ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಪ್ರಸ್ತಾವ ಸಲ್ಲಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿದ ಅವರುಈ ಯೋಜನೆಯಡಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಅವಕಾಶವಿರುವುದರಿಂದ ಜಿಲ್ಲೆಯಲ್ಲಿ ಮೊದಲ ವರ್ಷದ ಪ್ರಾಯೋಗಿಕವಾಗಿ ಕನಿಷ್ಠ 10 ಟನ್ ಸಾಮರ್ಥ್ಯದ ಶೀತಲೀಕರಣ ಘಟಕ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದರು.

ಪ್ರಸ್ತಾವ ಸಲ್ಲಿಸಿ:ಮೀನು ಉತ್ಪಾದನಾ ಘಟಕಗಳು, ಆಲಂಕಾರಿಕ ಮೀನು ಉತ್ಪಾದನಾ ಘಟಕಗಳ ಸ್ಥಾಪನೆಗೆ ಉತ್ತೇಜನ ಹಾಗೂ ಆಲಂಕಾರಿಕ ಮೀನು ಪ್ರದರ್ಶನ ಮಳಿಗೆ ಸ್ಥಾಪನೆ, ಮೀನು ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೀನು ಖಾದ್ಯಗಳ ಮಾರಾಟ ಮಳಿಗೆಗಳನ್ನು ಸ್ಥಾಪಿಸುವ ಕುರಿತಂತೆ ಪ್ರಸ್ತಾವ ಸಲ್ಲಿಸಲು ಸೂಚನೆ ನೀಡಿದರು.

ADVERTISEMENT

ಜಿಲ್ಲಾ ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಸಂತೋಷ ಕೊಪ್ಪದ ಮಾತನಾಡಿ, ‘ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಐದು ವರ್ಷಗಳ ಯೋಜನೆಯಾಗಿದೆ. ಮೀನು ಕೃಷಿ, ಆಲಂಕಾರಿಕ ಮೀನು ಕೃಷಿ, ಮೀನು ತಾಂತ್ರಿಕತೆ ಅಭಿವೃದ್ಧಿ, ಆಧುನಿಕ ಮೀನು ಶೀತಲೀಕರಣ ಘಟಕ ಸ್ಥಾಪನೆ, ಮೀನು ಆಹಾರ ಘಟಕ ಸ್ಥಾಪನೆ ಕುರಿತು ಮಾಹಿತಿ ನೀಡಿದರು.

ಅನುಮೋದನೆ:ಸಭೆಯಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರಿಕೆ ಇಲಾಖೆ ರೂಪಿಸಿರುವ 2020-21ನೇ ಸಾಲಿನ ಕ್ರಿಯಾಯೋಜನೆಯನ್ನು ಅನುಮೋದನೆಗೆ ಸಲ್ಲಿಸಿದರು. ವಿವಿಧ ಯೋಜನೆಗಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ, ಜಿಲ್ಲಾ ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಸ್.ಪಿ.ದಂಡೂರ, ವಿನಾಯಕ ಬೇವಿನಹಳ್ಳಿ, ಪ್ರಕಾಶ ಪಾವಡಿ, ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಪಿ.ಅಶೋಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.