ADVERTISEMENT

ಹಾನಿಯಾದ ಮನೆಗಳ ವರದಿ ಕೊಡಿ

ನದಿ ಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 16:27 IST
Last Updated 21 ಸೆಪ್ಟೆಂಬರ್ 2020, 16:27 IST
ಜಿಲ್ಲೆಯ ತಹಶೀಲ್ದಾರ್‌ಗಳೊಂದಿಗೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಸಂಜಯ ಶೆಟ್ಟೆಣ್ಣವರ ಅವರು ಸೋಮವಾರ ವಿಡಿಯೊ ಸಂವಾದ ನಡೆಸಿದರು
ಜಿಲ್ಲೆಯ ತಹಶೀಲ್ದಾರ್‌ಗಳೊಂದಿಗೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಸಂಜಯ ಶೆಟ್ಟೆಣ್ಣವರ ಅವರು ಸೋಮವಾರ ವಿಡಿಯೊ ಸಂವಾದ ನಡೆಸಿದರು   

ಹಾವೇರಿ: ಎರಡು ದಿನಗಳಿಂದ ಜಿಲ್ಲೆಯಲ್ಲಿ ತುಂತುರು ಮಳೆಯಾಗುತ್ತಿದೆ ಹಾಗೂ ಇನ್ನೆರಡು ದಿನ ಮಳೆ ಮುಂದುವರಿಯಲಿದ್ದು, ತಹಶೀಲ್ದಾರ್‌ಗಳು ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಬೇಕು. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಪಟ್ಟ ಗ್ರಾಮಗಳಿಗೆ ಮಾಹಿತಿ ನೀಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲೆಯ ತಹಶೀಲ್ದಾರ್‌ಗಳೊಂದಿಗೆ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ವಿಡಿಯೊ ಸಂವಾದ ನಡೆಸಿದ ಅವರು ಮಾತನಾಡಿದರು. ಮನೆಗಳ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವರದಿ ಸಲ್ಲಿಕೆಗೆ ಕಾರಣ ನೀಡುವುದನ್ನು ನಿಲ್ಲಿಸಿ, ಏನೇ ತಾಂತ್ರಿಕ ತೊಂದರೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ. ಜಿಲ್ಲೆಯಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಅಂತಿಮ ವರದಿಯನ್ನು ನಾಳೆ ಸಂಜೆಯೊಳಗೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಮನೆ ಸರ್ವೆ ಕಾರ್ಯದ ಉಸ್ತುವಾರಿಗೆ ಎಲ್ಲ ತಾಲ್ಲೂಕುಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಳೆದ ವರ್ಷದ ನೆರೆ ಹಾಗೂ ಅತಿವೃಷ್ಟಿಯಿಂದ ಹಾಳಾದ ಮನೆಗಳ ನೋಂದಣಿಯಲ್ಲಾದ ನ್ಯೂನತೆ ಸರಿಪಡಿಸಿ ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರ ಜಿಲ್ಲೆಯ 655 ಮನೆಗಳ ವರ್ಗ ಬದಲಾವಣೆ ಮಾಡಿ ಮಂಜೂರಾತಿ ನೀಡಿದೆ ಎಂದರು.

ADVERTISEMENT

ಜಿಲ್ಲೆಯಲ್ಲಿ 23 ರೈತರ ಆತ್ಮಹತ್ಯೆ ಪ್ರಕರಣಗಳಿದ್ದು, ಸೂಕ್ತ ದಾಖಲೆಗಳನ್ನು ಪರಿಶೀಲಿಸಿ ಪರಿಹಾರ ಮೊತ್ತವನ್ನು ನೀಡಲು ತಾಲ್ಲೂಕು ಹಂತದಲ್ಲಿ ಅಧಿಕಾರ ನೀಡಲಾಗಿದೆ. ಗುರುವಾರದೊಳಗಾಗಿ ಎಲ್ಲ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದರು.

ಬೆಳೆ ಸಮೀಕ್ಷೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ತೋಟಗಾರಿಕೆ ಹಾಗೂ ಕೃಷಿ ಬೆಳೆ ಲಾಗಿನ್ ಪ್ರಕ್ರಿಯೆ 15 ದಿನದೊಳಗಾಗಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಮಾತನಾಡಿ, ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ನೋಂದಣಿ ಸಮಯದಲ್ಲಿ ಕಳೆದ ವರ್ಷದಲ್ಲಿ ಆದ ತಪ್ಪಿನಿಂದ ಕೆಲವರು ಜೈಲಿಗೆ ಹೋಗಿದ್ದಾರೆ. ಈ ವಿಷಯವಾಗಿ ತನಿಖೆ ನಡೆಸಲಾಗುತ್ತಿದೆ ಇನ್ನೂ ಕೆಲವರು ಹೋಗುವವರಿದ್ದಾರೆ. ಹಾಗಾಗಿ ಮನೆಹಾನಿಯಾದ ಫಲಾನುಭವಿಗಳಿಗೆ ಶೀಘ್ರವಾಗಿ ಹಣ ಜಮೆಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ವಿಡಿಯೊ ಸಂವಾದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ, ಹಾವೇರಿ ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ, ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹಾವನೂರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.