ಬ್ಯಾಡಗಿ: ಪ್ರತಿಯೊಂದು ಮಗುವಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಹ ವಾತಾವರಣ ಸೃಷ್ಟಿಸಬೇಕಾಗಿದೆ. ಇಲ್ಲಿಯ ಮಕ್ಕಳು ಪದವಿ ಪೂರ್ವ ಹಾಗೂ ಉನ್ನತ ಶಿಕ್ಷಣದಿಂದ ವಂಚಿರಾಗಬಾರದು ಎನ್ನುವ ಉದ್ದೇಶದಿಂದ ಪದವಿಪೂರ್ವ ಕಾಲೇಜನ್ನು ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಅದನ್ನು ಉಳಿಸಿ ಬೆಳೆಸುವುದು ಸ್ಥಳೀಯರ ಕೈಯಲ್ಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಕಾರ್ಯಾರಂಭ ಮಾಡಿರುವ ನೂತನ ಸರ್ಕಾರಿ ಪದವಿಪೂರ್ವ ಕಾಲೇಜು ಉದ್ಘಾಟನೆಯನ್ನು ಬುಧವಾರ ನೆರವೇರಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಉತ್ತಮ ಶಿಕ್ಷಣ ಪಡೆದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರು ಕೈಜೋಡಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, ಸ್ವಾಮಿ ವಿವೇಕಾನಂದರು ಹೇಳಿದಂತೆ ಉದಾತ್ತ ಗುರಿಯೊಂದಿಗೆ ಶಿಕ್ಷಣ ಪಡೆದುಕೊಳ್ಳಬೇಕು. ಅದರಲ್ಲೂ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆದುಕೊಂಡು ತಮ್ಮ ಬದುಕು ಕಟ್ಟಿಕೊಳ್ಳಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್ ಮಾತನಾಡಿದರು. ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ₹5 ಲಕ್ಷ ದಾನವಾಗಿ ನೀಡಿದ ಹೆಸ್ಕಾಂ ಎಂಜಿನಿಯರ್ ಪರಶುರಾಮ ಬೆಳ್ಳಿಕಟ್ಟೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಮುಖಂಡರಾದ ಬಿ.ಎಂ.ಗೌರಾಪುರ, ಬಸವರಾಜ ಸವಣೂರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ಪ.ಪೂ ಕಾಲೇಜು ಉಪನಿರ್ದೇಶಕ ನಿರಂಜನಮೂರ್ತಿ, ಬಿಇಒ ಎಸ್.ಜಿ.ಕೋಟಿ, ಪ್ರಾಚಾರ್ಯ ಮಾಲತೇಶ ಬಂಡೆಪ್ಪನವರ, ನಿವೃತ್ತ ಶಿಕ್ಷಕ ಎನ್.ಎಫ್.ಹರಿಜನ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.