ADVERTISEMENT

ಅನುದಾನ ವಾಪಸ್‌; ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ

ಪ್ರಗತಿ ಪರಿಶೀಲನಾ ಸಭೆ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಖಡಕ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 16:54 IST
Last Updated 29 ಸೆಪ್ಟೆಂಬರ್ 2020, 16:54 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು 
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು    

ಹಾವೇರಿ: ‘ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬರುವ ನಾಲ್ಕು ತಿಂಗಳೊಳಗಾಗಿ ನಿಗದಿತಗುರಿ ಸಾಧಿಸಬೇಕು. ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. ಯೋಜನೆಗಳಿಗೆ ಮಂಜೂರಾದ ಅನುದಾನ ವಾಪಸ್‌ ಹೋದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ-2013ರನ್ವಯ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳ ಅಡಿ ರಾಜ್ಯ ವಲಯ, ಜಿಲ್ಲಾ ಪಂಚಾಯಿತಿಕಾರ್ಯಕ್ರಮಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಜನೆಗಳ ಅನುಷ್ಠಾನಕ್ಕೆ ಮಾರ್ಚ್‍ವರೆಗೆ ಕಾಯದೇ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು. ಸರ್ಕಾರದ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. ಯೋಜನೆಯ ಅನುದಾನದ ಜೊತೆಗೆ ನಗರ ಸ್ಥಳೀಯ ಸಂಸ್ಥೆಗಳ ಆದಾಯದಲ್ಲಿ ಶೇ 29ರಷ್ಟು ಎಸ್.ಸಿ/ ಎಸ್.ಟಿ. ಯೋಜನೆಗಳಿಗೆ ಖರ್ಚು ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಎಸ್.ಸಿ./ಎಸ್.ಟಿ. ಬೀದಿ ವ್ಯಾಪಾರಿಗಳನ್ನು ಗುರುತಿಸಿ ಅವರಿಗೆ ಸಾಲ ನೀಡುವ ಕೆಲಸವನ್ನು ಶೀಘ್ರವಾಗಿ ಮಾಡಬೇಕು. ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಡಿ ಎಸ್.ಸಿ./ಎಸ್.ಟಿ. ರೈತರಿಗೆ ಕೃಷಿ ಪರಿಕರ ಇತರೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಮಾತನಾಡಿ, ಜಿಲ್ಲೆಯ ವಿವಿಧ ತಾಲ್ಲೂಕಿನ ಜಾನುವಾರುಗಳಲ್ಲಿ ಲಂಪಿಸ್ಕಿನ್‌ ರೋಗ ಕಾಣಿಸಿಕೊಂಡಿದ್ದು, ಇಂತಹ ಜಾನುವಾರುಗಳಿಗೆ ಅಗತ್ಯ ಚಿಕಿತ್ಸೆ ನೀಡಬೇಕು ಹಾಗೂ ಜಾನುವಾರು ಚಿಕಿತ್ಸಾ ಶಿಬಿರ ಆಯೋಜಿಸುವಂತೆ ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ ಮಾತನಾಡಿ, ಕೆಲವು ಇಲಾಖೆಗಳು ವೆಬ್‍ಸೈಟ್‍ನಲ್ಲಿ ಆಯಾ ಇಲಾಖೆಗಳ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ.ಯೋಜನೆ, ಅನುದಾನ ಹಾಗೂ ಫಲಾನುಭವಿಗಳ ಮಾಹಿತಿಯನ್ನು ಅಪ್‍ಲೋಡ್ ಮಾಡಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ನೆಹರು ಓಲೇಕಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ರಾಜು ಕೂಲೇರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗರಾಜ, ಪೌರಾಯುಕ್ತ ಬಸವರಾಜ ಜಿದ್ದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.