ADVERTISEMENT

ಬ್ಯಾಡಗಿ | ಕೆರೆ ತುಂಬಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ: ರೈತರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 3:52 IST
Last Updated 6 ಸೆಪ್ಟೆಂಬರ್ 2025, 3:52 IST
ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ರೈತ ಮುಖಂಡ ರುದ್ರಗೌಡ ಕಾಡನಗೌಡ್ರ ಮಾತನಾಡಿದರು
ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ರೈತ ಮುಖಂಡ ರುದ್ರಗೌಡ ಕಾಡನಗೌಡ್ರ ಮಾತನಾಡಿದರು   

ಬ್ಯಾಡಗಿ: ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆ ಮೂಲಕ ಬ್ಯಾಡಗಿ ಮತ್ತು ಹಾನಗಲ್‌ ತಾಲ್ಲೂಕಿನ 137 ಕೆರೆಗಳಿಗೆ ನೀರು ತುಂಬಿಸುವ ₹115.60 ಕೋಟಿ ಮೊತ್ತದ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಚಿಕ್ಕಬಾಸೂರು ಗ್ರಾಮದ ರೈತರು ಶುಕ್ರವಾರ ಸಂಭ್ರಮಾಚರಣೆ ಮಾಡಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ ಮಾತನಾಡಿ, ‘ಸರ್ಕಾರ ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ, ಮೊದಲ ಹಂತದಲ್ಲಿ ₹50 ಕೋಟಿ ಮೊತ್ತದ ಕಾಮಗಾರಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ನಮ್ಮ ಬಹು ದಿನಗಳ ಬೇಡಿಕೆ, ಈಗ ಈಡೇರಿದೆ. ಸರ್ಕಾರ ಬೇಗನೆ ಅನುಷ್ಠಾನಕ್ಕೆ ತರಬೇಕು’ ಎಂದು ಆಗ್ರಹಿಸಿದರು.

‘ಏತ ನೀರಾವರಿ ಯೋಜನೆಯ ಕಾಲುವೆಗಳು ಶಿಥಿಲಗೊಂಡಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. ಹೀಗಾಗಿ, ಮಳೆಗಾಲದಲ್ಲಿ ಕೆರೆ ತುಂಬಿಸಲು ಸಾಧ್ಯವಾಗಿಲ್ಲ. ಕೊಳವೆಗಳ ಮೂಲಕ ನೀರು ತರುವುದರಿಂದ ಅನುಕೂಲವಾಗಿದೆ. ಬಾಕಿ ಹಣವನ್ನು ಬಿಡುಗಡೆ ಮಾಡಿ, ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು. ಕೆರೆ ತುಂಬಿಸಿದರೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಲಿದ್ದು, ಬೇಸಿಗೆಯಲ್ಲೂ ಬೆಳೆ ಬೆಳೆಯಲು ಅನುಕೂಲವಾಗಲಿದೆ’ ಎಂದರು.

ಪಿ.ಆರ್‌. ದೊಡ್ಮನಿ, ರುದ್ರಪ್ಪ ಹೊಂಕಣ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.