ADVERTISEMENT

ಜೀವನಮಟ್ಟ ಸುಧಾರಿಸಿದ ಗ್ಯಾರಂಟಿ ಯೋಜನೆ: ಶಾಸಕ ಶ್ರೀನಿವಾಸ ಮಾನೆ

ಫಲಾನುಭವಿಗಳ ಸ್ಪಂದನಾ ಸಮಾವೇಶ: ಶಾಸಕ ಶ್ರೀನಿವಾಸ ಮಾನೆ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 3:00 IST
Last Updated 5 ನವೆಂಬರ್ 2025, 3:00 IST
ಹಾನಗಲ್ ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸ್ಪಂದನಾ ಸಮಾವೇಶದಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು
ಹಾನಗಲ್ ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸ್ಪಂದನಾ ಸಮಾವೇಶದಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು   

ಹಾನಗಲ್: ಪಂಚ ಗ್ಯಾರಂಟಿ ಯೋಜನೆಗಳಿಂದ ತಾಲ್ಲೂಕಿನ 60 ಸಾವಿರಕ್ಕೂ ಅಧಿಕ ಕುಟುಂಬಗಳು ವಾರ್ಷಿಕ ತಲಾ ₹50 ಸಾವಿರದಿಂದ ₹60 ಸಾವಿರ ಆರ್ಥಿಕ ನೆರವು ಪಡೆಯುತ್ತಿವೆ. ತಾಲ್ಲೂಕಿಗೆ ಎರಡು ವರ್ಷಗಳಲ್ಲಿ ₹500 ಕೋಟಿ ಆರ್ಥಿಕ ನೆರವು ಸಿಕ್ಕಿದೆ. ಬೆಲೆ ಏರಿಕೆಯಿಂದ ಬಸವಳಿದಿದ್ದ ಜನರ ಜೀವನಮಟ್ಟ ಸುಧಾರಿಸಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸೋಮವಾರ ಆಯೋಜಿಸಿದ್ದ ಬಮ್ಮನಹಳ್ಳಿ ಹೋಬಳಿ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸ್ಪಂದನಾ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಗ್ಯಾರಂಟಿ ಯೋಜನೆಗಳು ಬಡವರು, ಮಧ್ಯಮ ವರ್ಗಗಳ ಕುಟುಂಬಗಳ ಬದುಕು ಬದಲಿಸಿವೆ, ಕಳೆದು ಹೋಗಿದ್ದ ಖುಷಿ ತರಿಸಿವೆ. ಇದನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು, ಮಾತೃ ಹೃದಯ ಇಲ್ಲದವರು ಟೀಕೆ ಮಾಡುತ್ತಿದ್ದಾರೆ’ ಎಂದರು.

ADVERTISEMENT

ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ‘ಗ್ಯಾರಂಟಿ ಯೋಜನೆ ಟೀಕಿಸಿದ ವಿರೋಧ ಪಕ್ಷಗಳು ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದ್ದು, ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ’ ಎಂದರು.

ತಾಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ ಮಾತನಾಡಿದರು.‌ ವಿರಕ್ತಮಠದ ಶಿವಯೋಗೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ. ಹಿರೇಮಠ, ಮುಖಂಡರಾದ ಟಾಕನಗೌಡ ಪಾಟೀಲ, ಖ್ವಾಜಾಮೊಹಿದ್ದೀನ ಜಮಾದಾರ, ಮಂಜು ಗೊರಣ್ಣನವರ, ಹನುಮಂತಪ್ಪ ಮರಗಡಿ, ಭರಮಣ್ಣ ಶಿವೂರ, ಶಿವು ಭದ್ರಾವತಿ, ತಾಲ್ಲೂಕು ಪಂಚಾಯಿತಿ ಇಒ ಪರಶುರಾಮ ಪೂಜಾರ, ಸಿಡಿಪಿಒ ರಾಮೂ ಬೈಲಸೀಮೆ ಮತ್ತು ಗ್ರಾಮ ಪಂಚಾಯಿತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಇದ್ದರು.

ತಾಲ್ಲೂಕಿನಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟಿವೆ. ಸರ್ಕಾರದ ಗಮನ ಸೆಳೆಯಲಾಗಿದ್ದು ರಸ್ತೆಗಳನ್ನು ಸುಧಾರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು
ಶ್ರೀನಿವಾಸ ಮಾನೆ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.