
ಹಾವೇರಿ: ‘ಬೆಳೆ ಪರಿಹಾರ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಖಾತೆಗೆ ಬರುವ ಹಣವನ್ನು ಬ್ಯಾಂಕ್‌ನವರು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಯೋಜನೆಗಳ ಪ್ರಯೋಜನ ಪಡೆಯಲು ಅಡ್ಡಿಯಾಗುತ್ತಿದೆ’ ಎಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಆಕ್ರೋಶ ಹೊರಹಾಕಿದರು.
ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ‘ಪರಿಶಿಷ್ಟ ಜಾತಿ (ಎಸ್.ಸಿ.), ಪರಿಶಿಷ್ಟ ಪಂಗಡದ (ಎಸ್.ಟಿ.) ಜನರ ಮೇಲಿನ ದೌರ್ಜನ್ಯ ನಿಯಂತ್ರಣ ತಡೆ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ’ಯಲ್ಲಿ ಪಾಲ್ಗೊಂಡಿದ್ದ ಸದಸ್ಯರು, ‘ಪರಿಹಾರ ಹಾಗೂ ಯೋಜನೆಯ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಆಗ್ರಹಿಸಿದರು.
‘ವೈದ್ಯಕೀಯ ವಿಜ್ಞಾನಗಳ ಕಾಲೇಜು (ಹಿಮ್ಸ್) ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಇಲಾಖಾವಾರು ಸಮುದಾಯಕ್ಕೆ ಹಂಚಿಕೆಯಾಗುವ ಅನುದಾನದ ಮಾಹಿತಿ ನೀಡಬೇಕು. ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲೇ ವೆಚ್ಚವಾಗಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಿಸಬೇಕು’ ಎಂದು ಸದಸ್ಯರು ಒತ್ತಾಯಿಸಿದರು.
‘ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪೌರ ಕಾರ್ಮಿಕರಿಗೆ ಕಾಲ ಕಾಲಕ್ಕೆ ವೇತನ ಪಾವತಿಸಬೇಕು. ಗುತ್ತಲದಲ್ಲಿ ನೂತನವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಿಸಬೇಕು. ಬಾಳಂಬೀಡ ಗ್ರಾಮದಲ್ಲಿ ಎಸ್.ಸಿ., ಎಸ್.ಟಿ. ಕಾಲೊನಿಯಲ್ಲಿ ಪಕ್ಕಾ ಗಟಾರ್ ನಿರ್ಮಿಸಬೇಕು. ಹೈ ಮಾಸ್ಟ್ ದೀಪ ಅಳವಡಿಸಬೇಕು’ ಎಂದು ಆಗ್ರಹಿಸಿದರು.
‘ಬರಡಿ ಹಾಗೂ -ಮರಡೂರ ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು ನೀಡಬೇಕು. ಸ್ಮಶಾನಕ್ಕೆ ಹೋಗಿಬರಲು ರಸ್ತೆ ಮಾಡಬೇಕು. ಮೆಡ್ಲೇರಿ ಗ್ರಾಮದ ಕಾಲೊನಿಯಲ್ಲಿ ಸಣ್ಣ ನೀರಾವರಿ ಇಲಾಖೆಯವರು ನಿರ್ಮಾಣ ಮಾಡಿದ ಕಾಲುವೆಯಲ್ಲಿ ನೀರು ನಿಂತು ತೊಂದರೆಯಾಗುತ್ತಿದ್ದು, ಅದನ್ನು ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.
ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ದೌರ್ಜನ್ಯ ತಡೆಗೆ ಅಗತ್ಯ ಕ್ರಮ ವಹಿಸಿ, ಸಮಾಜದಲ್ಲಿ ಬದಲಾವಣೆ ತರಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಅಧಿಕಾರಿಗಳು ಸಮಾಜದ ಪರವಾಗಿ ಕಾಳಜಿಯಿಂದ ಕೆಲಸ ಮಾಡಬೇಕು. ಸಮಾಜದ ಅಭಿವೃದ್ಧಿ ಕೆಲಸಗಳಲ್ಲಿ ಅಡಚಣೆಯಾದ ಸಂದರ್ಭದಲ್ಲಿ ಸಮಾಜದ ಮುಖಂಡರು ಸಹ ಸಹಕಾರ ನೀಡಬೇಕು. ಸಮುದಾಯದ ಸರ್ವಾಗೀಣ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ’ ಎಂದರು.
‘ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ಪೌರ ಕಾರ್ಮಿಕರ ವೇತನ ಪಾವತಿಗೆ ಮೊದಲ ಆದ್ಯತೆ ನೀಡಬೇಕು. ಕರ ವಸೂಲಿಗೆ ಹೆಚ್ಚಿನ ಗಮನಹರಿಸಬೇಕು. ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಸ್ಮಶಾನದ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ಸ್ಮಶಾನಕ್ಕೆ ಹೋಗಲು ದಾರಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ಪಡೆದುಕೊಂಡು ಜಮೀನು ಗುರುತಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿ.ಪಂ. ಸಿಇಒ ರುಚಿ ಬಿಂದಲ್, ಜಿಲ್ಲಾ ಎಸ್‌ಪಿ ಯಶೋಧಾ ವಂಟಗೋಡಿ, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಸಮಿತಿಯ ಸದಸ್ಯರಾದ ಶಿವರಾಜ ಹರಿಜನ, ಬಸವರಾಜ ಹೆಡಿಗ್ಗೊಂಡ, ಸಂಜಯಗಾಂಧಿ, ಎನ್.ಎಂ. ಗಾಳೆಮ್ಮನವರ, ರಮೇಶ ಕೊರವರ, ಅಜ್ಜಪ್ಪ ಗೋಣೆಮ್ಮನವರ, ಯಲ್ಲಪ್ಪ ದೇವಗಿರಿ, ಜಗದೀಶ ಹಾಜರಿದ್ದರು.
ಮೂರು ತಿಂಗಳಲ್ಲಿ 17 ಪ್ರಕರಣ
‘ಹಾವೇರಿ ಜಿಲ್ಲೆಯಲ್ಲಿ 2025ರ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ದೌರ್ಜನ್ಯ ತಡೆ ಕಾಯ್ದೆಯಡಿ 17 ಪ್ರಕರಣಗಳು ದಾಖಲಾಗಿವೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾಹಿತಿ ನೀಡಿದರು. ಸಭೆಯಲ್ಲಿ ಮಾತನಾಡಿದ ಅವರು ‘ಎಲ್ಲ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಮಂಜೂರು ಮಾಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.