ಹಾವೇರಿ: ‘ಹಾನಗಲ್ ಬಳಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದ ಕಾರಣ, ಆರೋಪಿಗಳಿಗೆ ಜಾಮೀನು ದೊರಕಿದೆ. ಮಹಿಳಾ ವಿರೋಧಿ ನಡೆ ಅನುಸರಿಸುತ್ತಿರುವ ಸರ್ಕಾರ, ಆರೋಪಿಗಳ ಪರವಾಗಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ’ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ದೂರಿದ್ದಾರೆ.
‘ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ನೀಡಿದ ಜಾಮೀನು ರದ್ದುಪಡಿಸಬೇಕು. ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
‘ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳು, ಜಾಮೀನು ಮೇಲೆ ಬಿಡುಗಡೆ ಆಗುತ್ತಿದ್ದಂತೆ ವಿಜಯೋತ್ಸವ ಮಾಡಿದ್ದಾರೆ. ಈ ಘಟನೆಯಿಂದ, ರಾಜ್ಯದ ಕಾನೂನು–ಸುವ್ಯವಸ್ಥೆಯನ್ನು ಪ್ರಶ್ನಿಸುವಂತಾಗಿದೆ. ಸಾಮೂಹಿಕ ಅತ್ಯಾಚಾರ ಎಸಗಿದರೂ ಕಾನೂನಿನಿಂದ ತಪ್ಪಿಸಿಕೊಳ್ಳಬಹುದೆಂಬ ಸಂದೇಶ ರವಾನೆಯಾಗುತ್ತಿದೆ’ ಎಂದಿದ್ದಾರೆ.
‘ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಇಷ್ಟು ಸರಳವಾಗಿ ಜಾಮೀನು ಹೇಗೆ ಸಿಕ್ಕಿತೆಂದು ಜನರು ಪ್ರಶ್ನಿಸುತ್ತಿದ್ದಾರೆ. ಪೊಲೀಸರು ನಡೆಸಿದ ತನಿಖೆ ಮೇಲೆಯೂ ಅನುಮಾನ ಮೂಡಿದೆ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಲು ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.