ಹಾವೇರಿ: ‘ವ್ಯಕ್ತಿ ಪೂಜೆಗಿಂತ ವ್ಯಕ್ತಿತ್ವದ ಪೂಜೆ ಕಡೆ ವಾಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಅವರ ಬುನಾದಿಯಿಂದಲೇ ನಾವೆಲ್ಲರೂ 75 ವರ್ಷಗಳವರೆಗೆ ಸಾಗಿ ಬಂದಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ಸಿದ್ಧಾರೂಢ ಕಾಲೊನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪರಿಶಿಷ್ಟ ಜಾತಿಗಳ ಒಕ್ಕೂಟಗಳ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‌ರಾಂ ಜಯಂತಿ ಸಮಾರಂಭ’ ಉದ್ಘಾಟಿಸಿ ಅವರು ಮಾತನಾಡಿದರು.
‘ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಸಿಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದನ್ನು ಸಂವಿಧಾನದ ಮೂಲಕ ಜನರಿಗೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ವ್ಯಕ್ತಿ–ವ್ಯಕ್ತಿಗಳ ಮಧ್ಯೆ ಸಂಘರ್ಷ ಸಹಜ. ಸಾವಿರಾರು ಜಾತಿ ಹಾಗೂ ನೂರಾರು ಭಾಷೆಗಳಿದ್ದರೂ ಭಾರತ ವಿವಿಧತೆಯಲ್ಲಿ ಏಕತೆ ಕಾಣುವ ರಾಷ್ಟ್ರವಾಗಿದೆ’ ಎಂದರು.
‘ಅಂಬೇಡ್ಕರ್ ಅವರು ಬಹುಮುಖ ಪ್ರತಿಭೆಯುಳ್ಳವರು. ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿದ್ದರು. ಅಸ್ಪಶ್ಯತೆ ಹೋಗಲಾಡಿಸಲು ಶ್ರಮಿಸಿದರು. ಧಮನಿತರಿಗೆ ಧ್ವನಿ ನೀಡಿದ ಧೀಮಂತ ನಾಯಕರಾದರು. ಸಂವಿಧಾನ ಗಟ್ಟಿಯಾಗಿ ಉಳಿಸಿ ಸಮಾಜದಲ್ಲಿ ಬದಲಾವಣೆ ತರುವಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಸೇರಿದಂತೆ ಹಲವರನ್ನು ನಾವು ಸ್ಮರಿಸಬೇಕು. ಸದೃಢ ಸಮಾಜ ಕಟ್ಟಲು ಕೈಜೋಡಿಸಬೇಕು’ ಎಂದು ತಿಳಿಸಿದರು.
‘ಹಸಿರು ಕ್ರಾಂತಿಯ ಹರಿಕಾರರೂ ಆಗಿರುವ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‌ರಾಂ, ಸಂಘರ್ಷದ ಜೀವನ ನೋಡಿದವರು. ಸ್ವಾತಂತ್ರ್ಯ ಪೂರ್ವದಲ್ಲಿ ₹ 38 ಕೋಟಿ ಜನರಿಗೆ ಆಹಾರ ಸಮಸ್ಯೆ ಎದುರಾಗಿತ್ತು. ಬಾಬು ಜಗಜೀವನ್‌ರಾಂ ಅವರು ಆಹಾರ ಉತ್ಪಾದನೆಯಲ್ಲಿ ಮಾಡಿದ ಕ್ರಾಂತಿಯಿಂದ ಹಸಿರು ಕ್ರಾಂತಿಯ ಹರಿಕಾರ ಎನಿಸಿಕೊಂಡರು’ ಎಂದು ಹೇಳಿದರು.
ಉಪನ್ಯಾಸಕ ಮಾಲತೇಶ ಪೂಜಾರ ಅವರು ಬಿ.ಆರ್.ಅಂಬೇಡ್ಕರ್ ಬಗ್ಗೆ ಹಾಗೂ ಉಪನ್ಯಾಸಕ ಹನುಮಂತಪ್ಪ ಸಂಜೀವಣ್ಣನವರ ಅವರು ಡಾ. ಬಾಬು ಜಗಜೀವನ್‌ರಾಂ ಬಗ್ಗೆ ಉಪನ್ಯಾಸ ನೀಡಿದರು.
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು, ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಜಿಲ್ಲಾ ಎಸ್ಪಿ ಅಂಶುಕುಮಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಸಹಾಯಕ ನಿರ್ದೇಶಕ ಆಂಜನೇಯ ಹುಲ್ಲಾಳ ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು. ನಂತರ, ಸಾರೋಟಿನಲ್ಲಿ ಚಿತ್ರದ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.