ಹಾವೇರಿ: ‘ಕಾಂಗ್ರೆಸ್ ನೇತೃತ್ವದ ಸರ್ಕಾರದ ಕುಮ್ಮಕ್ಕಿನಿಂದ ಜಿಲ್ಲೆಯಲ್ಲಿ ಜೂಜು, ಮಟ್ಕಾ ಸೇರಿ ಅಕ್ರಮ ಚಟುವಟಿಕೆಗಳು ಮಿತಿಮೀರಿ ನಡೆಯುತ್ತಿದೆ. ಇದನ್ನು ತಡೆಯಬೇಕಾದ ಪೊಲೀಸರು ಮೌನವಾಗಿದ್ದು, ಅವರಿಗೆ ಪ್ರತಿ ತಿಂಗಳು ಇಂತಿಷ್ಟು ಹಣದ ಮಾಮೂಲಿ ಹೋಗುತ್ತಿದೆ’ ಎಂದು ಬಿಜೆಪಿ ಹಾವೇರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಆಡಳಿತದ ಮೇಲೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಮಾನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯಾಬಲದೊಂದಿಗೆ ಪುನಃ ಅಧಿಕಾರಕ್ಕೆ ಬರುವ ವಿಶ್ವಾಸವಿದೆ’ ಎಂದರು.
‘ಧರ್ಮಗಳ ನಡುವೆ ಜಗಳ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಕಾಮಗಾರಿಗಳನ್ನೇ ಕಾಂಗ್ರೆಸ್ ಶಾಸಕರು ಉದ್ಘಾಟಿಸುತ್ತಿದ್ದಾರೆ. ಜೂಜು ಹಾಗೂ ಮಟ್ಕಾ ನಡೆಸುತ್ತಿರುವ ಆರೋಪಿಗಳನ್ನು, ಶಾಸಕರು–ಇತರೆ ಜನಪ್ರತಿನಿಧಿಗಳೇ ರಕ್ಷಿಸುತ್ತಿದ್ದಾರೆ’ ಎಂದು ದೂರಿದರು.
‘ಕಾಂಗ್ರೆಸ್‌ನ ಅಕ್ರಮ ಪ್ರಶ್ನಿಸುವ ಬಿಜೆಪಿ ಕಾರ್ಯಕರ್ತರ ಮೇಲೆ ಎಸ್.ಸಿ.ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿ ವಿವಿಧ ಆರೋಪದಡಿ ಪ್ರಕರಣ ದಾಖಲಿಸಿ ಬೆದರಿಸುವ ಕೆಲಸಗಳು ನಡೆಯುತ್ತಿವೆ. ಇದರ ವಿರುದ್ಧ ನಮ್ಮ ಹೋರಾಟ ನಡೆಯಲಿದೆ’ ಎಂದರು.
ಪದಗ್ರಹಣ ಸಮಾರಂಭ ನಾಳೆ: ‘ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಅರುಣಕುಮಾರ ಪೂಜಾರ ರಾಜೀನಾಮೆಯಿಂದ ತೆರುವಾದ ಸ್ಥಾನಕ್ಕೆ ನನ್ನನ್ನು ನೇಮಿಸಲಾಗಿದೆ. ಹಾವೇರಿಯ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಜೂನ್ 23ರಂದು ಬೆಳಿಗ್ಗೆ 11 ಗಂಟೆಗೆ ಪದಗ್ರಹಣ ಸಮಾರಂಭ ಜರುಗಲಿದೆ. ಸಂಸದ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ’ ಎಂದು ವಿರೂಪಾಕ್ಷಪ್ಪ ತಿಳಿಸಿದರು.
ಮುಖಂಡ ಶಿವರಾಜ ಸಜ್ಜನರ ಮಾತನಾಡಿ, ‘ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕರ ಕೈಗೊಂಬೆಯಾಗಿ ಪೊಲೀಸರು–ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ವೇತನಕ್ಕಿಂತ ಮಾಮೂಲಿಯೇ ಹೆಚ್ಚು ಬರುತ್ತಿದೆ’ ಎಂದು ಆರೋಪಿಸಿದರು.
ಮುಖಂಡರಾದ ನಾಗೇಂದ್ರ ಕಡಕೋಳ, ಪರಮೇಶ್ವರಪ್ಪ ಮೇಗಿಲಮನಿ, ಶೋಭಾ ನಿಸ್ಸಿಮಗೌಡ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.