ADVERTISEMENT

ಮನೆ ನಿರ್ಮಾಣ ವಾರದೊಳಗೆ ಆರಂಭಿಸಿ: ಮನೋಜ್‍ಕುಮಾರ್ ಮೀನಾ

ನೆರೆ ಪರಿಹಾರ ನಿರ್ಲಕ್ಷ್ಯ ಮಾಡುವ ಅಧಿಕಾರಿಗಳಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 13:54 IST
Last Updated 12 ಫೆಬ್ರುವರಿ 2020, 13:54 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಸತಿ ಇಲಾಖೆ ಕಾರ್ಯದರ್ಶಿ ಮನೋಜ್‍ಕುಮಾರ್ ಮೀನಾ ಅವರು ನೆರೆ ಸಂತ್ರಸ್ತರಿಗೆ ಪುನರ್ ವಸತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಸತಿ ಇಲಾಖೆ ಕಾರ್ಯದರ್ಶಿ ಮನೋಜ್‍ಕುಮಾರ್ ಮೀನಾ ಅವರು ನೆರೆ ಸಂತ್ರಸ್ತರಿಗೆ ಪುನರ್ ವಸತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು   

ಹಾವೇರಿ: ‘ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆಗಳ ಪುನರ್‌ ನಿರ್ಮಾಣ ಕಾರ್ಯವನ್ನು ವಾರದೊಳಗೆ ಆರಂಭವಾಗಲೇಬೇಕು.ಈ ವಿಚಾರವನ್ನು ನಿರ್ಲಕ್ಷ್ಯ ಮಾಡುವ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‍ಕುಮಾರ್ ಮೀನಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ನೆರೆ ಸಂತ್ರಸ್ತರಿಗೆ ಪುನರ್ ವಸತಿ, ಪರಿಹಾರ ಕಾರ್ಯ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಮನೆ ಕಳೆದುಕೊಂಡು ಐದಾರು ತಿಂಗಳಾದರೂ, ಒಂದು ಮನೆಯೂ ಪೂರ್ಣಗೊಂಡಿಲ್ಲ. ತಳಪಾಯ ಹಾಕಲು ಮೊದಲ ಕಂತಾಗಿ ₹1 ಲಕ್ಷವನ್ನು ಪಾವತಿಸಲಾಗಿದೆ. ಆದರೂ ನಿರೀಕ್ಷಿತ ಪ್ರಮಾಣದಲ್ಲಿ ಸಾಧನೆಯಾಗಿಲ್ಲ. ಅಧಿಕಾರಿಗಳು ಈ ನಿಟ್ಟಿನಲ್ಲಿ ಆದ್ಯತೆಯ ಮೇಲೆ ಕಾರ್ಯನಿರ್ವಹಿಸಬೇಕು’ ಎಂದರು.

‘ದೇಶದ ಯಾವುದೇ ರಾಜ್ಯಗಳಲ್ಲಿ ₹5 ಲಕ್ಷದಷ್ಟು ದೊಡ್ಡ ಮೊತ್ತದ ಪರಿಹಾರ ಘೋಷಣೆಯಾಗಿಲ್ಲ. ಪರಿಹಾರ ಪಡೆದು ಮನೆ ನಿರ್ಮಾಣಕ್ಕೆ ಮುಂದಾಗದ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ಕೈಬಿಡಿ. ಅಗತ್ಯವಿದ್ದವರಿಗೆ ಮನೆ ನಿರ್ಮಾಣ ಮಾಡಿಕೊಡಿ. ಮನೆ ಹಾನಿಯಾದ ನಿವೇಶನದ ಬದಲು ಬೇರೆಡೆ ನಿರ್ಮಾಣ ಮಾಡಲು ಬೇಡಿಕೆ ಸಲ್ಲಿಸಿದರೆ ಕಾನೂನು ಬದ್ಧವಾದ ನಿವೇಶನವಿದ್ದರೆ ಜಿಲ್ಲಾಧಿಕಾರಿಗಳೇ ಅನುಮತಿ ನೀಡುತ್ತಾರೆ’ ಎಂದು ಸೂಚಿಸಿದರು.

ADVERTISEMENT

ಶಾಶ್ವತ ನೀರಿನ ಮೂಲಗಳು ದೊರೆತರೆ ಮಾತ್ರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಪ್ರಸ್ತಾವ ಸಲ್ಲಿಸಿ.ಶುದ್ಧ ನೀರಿನ ಘಟಕಗಳ ನಿರ್ವಹಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು ಈ ಘಟಕಗಳ ಸಮರ್ಪಕ ನಿರ್ವಹಣೆ ಕುರಿತು ಎಲ್ಲ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

ಸಾಂಪ್ರದಾಯಿಕ ಕೃಷಿಗಿಂತ ರೈತರಿಗೆ ಸುಸ್ಥಿರಆದಾಯ ತರುವ ಬೆಳೆಗಳಿಗೆ ಪ್ರೋತ್ಸಾಹ ನೀಡಿ. ಕೃಷಿಯೊಂದಿಗೆ ತೋಟಗಾರಿಕೆ, ಹೈನುಗಾರಿಕೆಯತ್ತಚಟುವಟಿಕೆಗಳಿಗೆ ಉತ್ತೇಜನ ನೀಡಿ. ಈ ಕುರಿತು ಕೋಲಾರ ಜಿಲ್ಲೆಯ ರೈತರು ಮಾದರಿ ಕೃಷಿಯನ್ನು ಅಧ್ಯಯನ ಮಾಡಿಎಂದು ಕೃಷಿ ಜಂಟಿ ನಿರ್ದೇಶಕರಿಗೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಅಪೌಷ್ಟಿಕತೆ, ಹೆರಿಗೆ ಸಮಯದಲ್ಲಿ ತಾಯಿ-ಮಗುವಿನ ಮರಣ ಪ್ರಮಾಣವನ್ನು ಪರಿಶೀಲನೆ ನಡೆಸಿ, ಅಂಗನವಾಡಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ, ಅಪೌಷ್ಟಿಕ ಮಕ್ಕಳು ಕಂಡುಬಂದರೆ ಕಾಳಜಿಯಿಂದ ಅವರ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಸಮರ್ಪಕ ಅನುಷ್ಠಾನದ ಬಗ್ಗೆ ನಿಗಾ ವಹಿಸಬೇಕು’ ಎಂದು ಸೂಚಿಸಿದರು.

ಕಂದಾಯ ಇಲಾಖೆಯಲ್ಲಿ ಆರು ತಿಂಗಳಿಗಿಂತ ಹೆಚ್ಚಿನ ಅವಧಿಯಲ್ಲಿ ಯಾವುದೇ ಪ್ರಕರಣಗಳು ಬಾಕಿ ಉಳಿಸಿಕೊಳ್ಳಬಾರದು. ತ್ವರಿತವಾಗಿ ನ್ಯಾಯಾಲಯದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ತಹಶೀಲ್ದಾರ್‌, ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪಂಚಾಯತ್ ಸಿಇಒ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.